ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: 14 ಜನರು ಸಾವು, 40 ಕ್ಕೂ ಹೆಚ್ಚು ಮಂದಿಗೆ ಗಾಯ

ಮಧ್ಯಪ್ರದೇಶ: ಬಸ್​​ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ, 14 ಜನರು ಸ್ಥಳದಲ್ಲೇ ಮೃತಪಟ್ಟ ಭೀಕರ ಅಪಘಾತ ರೇವಾ ಬಳಿ ಸಂಭವಿಸಿದೆ. ಈ ರಸ್ತೆ ಅಪಘಾತದಲ್ಲಿ 40 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 30 ರಲ್ಲಿ ಶುಕ್ರವಾರ ರಾತ್ರಿ 11.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ವಿಷಯ ತಿಳಿದ ಕೂಡಲೆ ಸ್ಥಳಕ್ಕೆ ಧಾವಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆಯನ್ನು ಮಾಡಿದ್ದಾರೆ. ಬಸ್ಸಿನೊಳಗೆ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಹೊರತೆಗೆಯಲಾಯಿತು. ಆದರೆ ಬಸ್ಸಿನ ಕ್ಯಾಬಿನ್‌ನಲ್ಲಿ ಸುಮಾರು ಮೂರರಿಂದ 4 ಮಂದಿ ಸಿಲುಕಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ತಕ್ಷಣ ಆಂಬ್ಯುಲೆನ್ಸ್‌ಗಳನ್ನು ಕರೆಸಿ, ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಥಿಯೋಂಥರ್ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ದೀಪಾವಳಿ ಆಚರಣೆಯಲ್ಲಿ ಪಾಲ್ಗೊಳ್ಳಲು ಈ ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.