ಬೆಂಗಳೂರು: ಕರ್ನಾಟಕ ವಿಧಾನಭೆಯ ಉಪ ಸಭಾಪತಿ ಸವದತ್ತಿ ಶಾಸಕ ಆನಂದ್ ಮಾಮನಿ (56) ಶನಿವಾರ ರಾತ್ರಿ12 ಗಂಟೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಆನಂದ ಮಾಮನಿ ಕಳೆದ ಕೆಲ ದಿನಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರು ಚೆನ್ನೈ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಇಂದು ಮಧ್ಯಾಹ್ನ ಸವದತ್ತಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ಮಾಮನಿ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. “ನಮ್ಮ ಪಕ್ಷದ ಶಾಸಕರು, ರಾಜ್ಯ ವಿಧಾನಸಭೆಯ ಮಾನ್ಯ ಉಪ ಸಭಾಧ್ಯಕ್ಷರಾದ ಆತ್ಮೀಯ ಶ್ರೀ ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ” ಎಂದು ಟ್ವಿಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ.