ರಾಜ್ಯದಲ್ಲಿ ಮತ್ತೆ ಮಳೆ ಕಂಟಕ.! ನ. 2 ರಿಂದ ಹಲವೆಡೆ ‘ಯೆಲ್ಲೋ’ ಅಲರ್ಟ್.! ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ನವೆಂಬರ್ 2 ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಇನ್ನೆರಡು ದಿನ ಹಗುರ ಮಳೆಯಾಗಲಿದ್ದು ನ. 2 ರಿಂದ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಈ ಬಾರಿ ರಾಜ್ಯದಾದ್ಯಂತ ಎಡಬಿಡದೇ ಮಳೆ ಸುರಿದು ಜನತೆ ತತ್ತರಿಸಿ ಹೋಗಿದ್ದರು. ಬಳಿಕ ಮಳೆ ಬಿಡುವು ಕೊಟ್ಟಿತ್ತು. ಆದರೆ ನ. 2 ರಿಂದ ಐದು ದಿನಗಳ‌ ಕಾಲ ಉತ್ತಮ ಮಳೆಯಾಗಲಿದೆ ಎಂದು ಹವಾಮನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಮಳೆಯಾಗಲಿದೆ.?

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಒಂದು ದಿನ ‘ಯೆಲ್ಲೋ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡಿನ ಭಾಗದಲ್ಲಿ ಮುಂದಿನ ಮೂರು ದಿನ ಮೋಡ ಕವಿದ ವಾತಾವರಣವಿರಲಿದ್ದು, ಕರಾವಳಿಯ ಮೂರು ಜಿಲ್ಲೆಗಳಲ್ಲಿ ಬಹಳಷ್ಟು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕವಾಗಿ ಹಿಂಗಾರು ಮಳೆ ಅಬ್ಬರಿಸಲಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ, ಕೊಡಗು, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ನ.3 ರಂದು ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ.