ಬೆಂಗಳೂರು: ರಾಜ್ಯದಾದ್ಯಂತ 67ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಡಿನ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಬೊಮ್ಮಾಯಿಯವರು, ನಾಡಿನ ಸಮಸ್ತ ಜನತೆಗೆ 67ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ನಾಡಿನ ಏಕತೆ, ಸಮಾನತೆ, ಸ್ವಾಭಿಮಾನ ಹಾಗೂ ಸಹಬಾಳ್ವೆಯ ಸಂಕೇತವೇ ರಾಜ್ಯೋತ್ಸವ. ಪ್ರತಿಯೊಬ್ಬ ಕನ್ನಡಿಗನಿಗೂ ಆರ್ಥಿಕ & ಸಾಮಾಜಿಕ ಭದ್ರತೆ ಕಲ್ಪಿಸುವುದು ನಮ್ಮ ಸಂಕಲ್ಪವಾಗಿದೆ ಎಂದು ಹೇಳಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನೀಲ್ ಕುಮಾರ್ ಅವರು ಟ್ವೀಟ್ ಮಾಡಿ, ಕರುನಾಡು ಸಸ್ಯ ಶ್ಯಾಮಲೆಯ ತವರೂರು ಅನ್ನಪೂರ್ಣೆಯ ನೆಲೆಬೀಡು ಶಿಲ್ಪಕಲೆಗಳ ಸಿರಿನಾಡು, ಜೀವ ನದಿಗಳು ಹರಿದಾಡುವ ಪುಣ್ಯ ಭೂಮಿ, ನಿಸರ್ಗ ಚೆಲುವಿನ ಅದ್ಬುತ ಕರ್ಮಭೂಮಿ. ನಾಡಿನ ಸಮಸ್ತ ಕನ್ನಡಿಗರಿಗೆ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು ಎಂದು ತಿಳಿಸಿದ್ದಾರೆ.