ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇನ್ನೂ 5 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಒಳನಾಡು, ಬೆಂಗಳೂರು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇಂದಿನಿಂದ ನವೆಂಬರ್ 6ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ನವೆಂಬರ್ 3ರಂದು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ. ಈಶಾನ್ಯ ಮಾನ್ಸೂನ್ ದಕ್ಷಿಣದ ರಾಜ್ಯಗಳಾದ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಕ್ಕೆ ಆಗಮಿಸುತ್ತಿದ್ದಂತೆ ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ 3 ದಿನಗಳವರೆಗೆ ಮಳೆಯ ಎಚ್ಚರಿಕೆಯನ್ನು ನೀಡಿದೆ.