ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ವಿಶ್ವದ ಮುಂದೆ ದೇಶದ ಶಕ್ತಿ ಅನಾವರಣ.!

ನವದೆಹಲಿ: ದೇಶಾದ್ಯಂತ 74 ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ರಾಷ್ಟ್ರ ರಾಜಧಾನಿ ದೆಹಲಿಯ ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಧ್ವಜಾರೋಹಣ ನೆರವೇರಿಸಿದರು.

ಗಣರಾಜ್ಯೋತ್ಸವ ಸಮಾರಂಭದಲ್ಲಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ. ಈ ವೇಳೆ ರಾಷ್ಟ್ರಪತಿಗಳಿಗೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಯದೀಪ್‌ ಧನಕರ್‌ ಸಾಥ್‌ ನೀಡಿದ್ದಾರೆ.

ಧ್ವಜಾರೋಹಣದ ಬೆನ್ನಲ್ಲೇ ರಾಷ್ಟ್ರಪತಿಗಳಿಗೆ 21 ತೋಪಿನ ಸನ್ಮಾನ ನೀಡಿ ಗೌರವಿಸಲಾಯಿತು. ಬಳಿಕ ಗಣರಾಜ್ಯೋತ್ಸವದ ಪರೇಡ್‌ ಆರಂಭವಾಯಿತು. ರಾಜಪಥ್‌ ಕರ್ತವ್ಯಪಥ ಎಂದು ಮರುನಾಮಕರಣಗೊಂಡ ಬಳಿಕ ನಡೆಯುತ್ತಿರುವ ಮೊದಲ ಗಣರಾಜ್ಯೋತ್ಸವ ಇದಾಗಿದ್ದು, ಪರೇಡ್‌ ಮೂಲಕ ವಿಶ್ವದ ಮುಂದೆ ದೇಶದ ಶಕ್ತಿ ಕರ್ತವ್ಯಪಥದಲ್ಲಿ ಮೊದಲ ಬಾರಿಗೆ ಅನಾವರಣಗೊಂಡಿದೆ. ಇದೇ ಮೊದಲ ಬಾರಿಗೆ ಈಜಿಪ್ಟ್‌ ಸೇನಾಪಡೆಗಳು ಕೂಡ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಭಾಗಿಯಾಗಿದ್ದು, ಈಜಿಪ್ಟ್‌ ಸೇನಾ ಪಡೆಗಳ 144 ಸೈನಿಕರು ಪ್ರಜಾರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಿದ್ದಾರೆ.

ಕರ್ತವ್ಯಪಥದಲ್ಲಿ ನಡೆದ ಪಥಸಂಚಲನದಲ್ಲಿ ಆತ್ಮ ನಿರ್ಭರ ಭಾರತ ಅಭಿಯಾನದ ಅಡಿಯಲ್ಲಿ ಅರ್ಜುನ್ ಟ್ಯಾಂಕ್, ನಾಗ್ ಮಿಸೈಲ್ ಸಿಸ್ಟಮ್, ಕೆ9 ವಜ್ರ ಮತ್ತು ಆಕಾಶ್ ವೆಪನ್ ಸಿಸ್ಟಮ್ ಅನ್ನು ಭಾರತೀಯ ಸೇನೆಯಿಂದ ಪ್ರದರ್ಶಿಸಲಾಯಿತು.