ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಇದರಲ್ಲಿ ಭಜರಂಗದಳ ನಿಷೇಧ ವಿಷಯ ಖಂಡಿಸಿ ಭಜರಂಗ ದಳ ಪ್ರಣಾಳಿಕೆಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿತು. ತಮ್ಮ ಸಂಘಟನೆ ನಿಷೇಧ ಮಾಡುವ ವಿಷಯ ಕುರಿತು ಭಜರಂಗದಳದ ಕಾರ್ಯಕರ್ತರು ಕಾಂಗ್ರೆಸ್ ಕಚೇರಿ ಬಳಿ ಪ್ರತಿಭಟನೆ ನಡೆಸಿ ಮುಂಬರುವ ಕರ್ನಾಟಕ ಚುನಾವಣೆಗೆ ಬಿಡುಗಡೆ ಮಾಡಿರುವ ಪಕ್ಷದ ಪ್ರಣಾಳಿಕೆಯನ್ನು ಸುಟ್ಟು ಹಾಕಿದರು.
ಮಂಗಳವಾರ ಕಾಂಗ್ರೆಸ್ ತನ್ನ ಕರ್ನಾಟಕ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಇತರ ಸಂಘಟನೆಗಳನ್ನು ನಿಷೇಧಿಸುವುದು ಸೇರಿದಂತೆ ಕಾನೂನಿನ ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ ಎಂದು ಹೇಳಿದ ನಂತರ ರಾಜ್ಯದಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಸಂವಿಧಾನದ ವಿಧಿ ಉಲ್ಲಂಘಿಸುವ ಯಾವುದೇ ಸಂಘಟನೆಗಳ ಮೇಲೆ ನಿಷೇಧ ಹೇರುವುದು ಸೇರಿದಂತೆ ಕಾನೂನು ಪ್ರಕಾರ ನಾವು ನಿರ್ಣಾಯಕ ಕ್ರಮ ಕೈಗೊಳ್ಳುತ್ತೇವೆ ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಲ್ಲಿ ಬಿಡುಗಡೆ ಮಾಡಿದ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ.