ಸಿಎಂ, ಡಿಸಿಎಂ ಪ್ರಮಾಣ ವಚನ: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ರಾಹುಲ್‌, ಪ್ರಿಯಾಂಕಾ ಗಾಂಧಿ ಸ್ವಾಗತಿಸಿದ ಡಿಕೆಶಿ

ಬೆಂಗಳೂರು(ಮೇ.20): ಇಂದು(ಶನಿವಾರ) ಮಧ್ಯಾಹ್ನ 12-30 ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಿಎಂ, ಡಿಸಿಎಂ ಸೇರಿದಂತೆ 8 ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಎಐಸಿಸಿ ವರಿಷ್ಠ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. 

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನ ಕೆಪಿಸಿಸಿ ಅಧ್ಯಕ್ಷ ಹಾಗೂ ನಿಯೋಜಿತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಸ್ವಾಗತಿಸಿದ್ದಾರೆ. 

ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರಿಗೆ ಹೂಗುಚ್ಛ ನೀಡಿ ಬರಮಾಡಿಕೊಂಡಿದ್ದಾರೆ. ವಿಮಾನ ನಿಲ್ದಾನನಿಂದ ನೇರವಾಗಿ ನಗರದ ಕಂಠೀರವ ಕ್ರೀಡಾಂಗಣಕ್ಕೆ ತೆರಳಲಿದ್ದಾರೆ. 

ಕಂಠೀರವ ಕ್ರೀಡಾಂಗಣದಲ್ಲಿ ಸಿದ್ದರಾಮಯ್ಯ ಅವರು ಸಿಎಂ ಆಗಿ, ಡಿ.ಕೆ. ಶಿವಕುಮಾರ್‌ ಅವರು ಉಪಮುಖ್ಯಮಂತ್ರಿಯಾಗಿ ಹಾಗೂ 8 ಜನ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.  

ಪ್ರಮಾಣ ವಚನ ಕಾರ್ಯಕ್ರಮಕ್ಕೆ ರಾಷ್ಟ್ರ ನಾಯಕರೂ ಕೂಡ ಆಗಮಿಸಿದ್ದಾರೆ. ಇಂದಿನ ಪದಗ್ರಹಣ ಕಾರ್ಯಕ್ರಮಕ್ಕೆ ಸುಮಾರು 1 ಲಕ್ಷ ಜನರು ಸಾಕ್ಷಿಯಾಗಲಿದ್ದಾರೆ.