ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶ, ರಾಜ್ಯಕ್ಕೆ ಹವಾಮಾನ ಇಲಾಖೆ ಕೊಟ್ಟ ಮುನ್ಸೂಚನೆ ಏನು?

ಬೆಂಗಳೂರು: ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ(Karnataka) ಮುಂಗಾರು(Monsoon) ಪ್ರವೇಶ ಮಾಡಲಿದೆ. ಅದಕ್ಕೂ ಮೊದಲು ಅಂದ್ರೆ ಈ ಮೇ ತಿಂಗಳ ಅಂತ್ಯಕ್ಕೆ ಕರ್ನಾಟಕದಲ್ಲಿ ಮಳೆ(Rain) ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 31, ಜೂನ್ 1ರಂದು ದಕ್ಷಿಣ ಒಳನಾಡಿನ 10 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯಲ್ಲೋ ಅಲರ್ಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಈ ತಿಂಗಳ ಅಂತ್ಯಕ್ಕೆ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೊಡಗು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ರಾಮನಗರ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿಯೂ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನುಳಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಮೈಸೂರು, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.