ಧಾರವಾಡ-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ (Dharwad-Bangalore Vande Bharat train) ಆರಂಭವಾಗುವ ನಿಟ್ಟಿನಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿಯವರು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಜೊತೆ ಮಹತ್ವದ ಚರ್ಚೆ ನಡೆಸಿದ್ದಾರೆ. ಬರುವ ಎರಡು ತಿಂಗಳೊಳಗೆ ಧಾರವಾಡ ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸೇವೆ ಆರಂಭವಾಗಲಿದೆ ಎಂದು ಕೇಂದ್ರ ರೈಲ್ವೇ ಸಚಿವ (Minister of Railways) ಅಶ್ವಿನಿ ವೈಷ್ಣವ್ (Ashwini Vaishnaw) ಅವರು ತಮ್ಮ ಸಹೋದ್ಯೋಗಿ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ (Pralhad Joshi) ಭರವಸೆ ನೀಡಿದ್ದಾರೆ.
ಈ ಕುರಿತಂತೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರೈಲು ಸೇವೆಯ ಆರಂಭಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. ಜುಲೈ ವೇಳೆಗೆ ರಾಜ್ಯದ ಎರಡನೇ ವಂದೇ ಭಾರತ್ ರೈಲಿಗೆ ಚಾಲನೆ ನೀಡುವ ಭರವಸೆಯನ್ನು ರೈಲ್ವೇ ಸಚಿವರು ನೀಡಿದ್ದಾರೆ ಎಂದು ಜೋಶಿ ತಿಳಿಸಿದ್ದಾರೆ. ಧಾರವಾಡ ಬೆಂಗಳೂರು ವಂದೇ ಭಾರತ್ ರೈಲು ಸಂಚಾರ ಆರಂಭಿಸಿದರೆ ರಾಜ್ಯದ ಎರಡನೆಯ ವಂದೇ ಭಾರತ್ ರೈಲು ಇದಾಗಲಿದೆ.