ಸಾಕಷ್ಟು ರೋಚಕತೆ ಸೃಷ್ಟಿಸಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್


ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಹುನಿರೀಕ್ಷಿತ ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಜೂನ್ 7 ರಿಂದ 11 ರ ವರೆಗೆ ಈ ಮಹತ್ವದ ಪಂದ್ಯ ನಡೆಯಲಿದ್ದು, ಇನ್ನು ಕೇವಲ ಒಂದು ದಿನವಷ್ಟೇ ಬಾಕಿಯಿದೆ.
ಈಗಾಗಲೇ ಉಭಯ ತಂಡಗಳು ಲಂಡನ್ನ ಪ್ರತಿಷ್ಠಿತ ಕೆನ್ನಿಂಗ್ಟನ್ ಓವಲ್ ಮೈದಾನಕ್ಕೆ ತಲುಪಿದ್ದು ಅಭ್ಯಾಸದಲ್ಲಿ ನಿರತರಾಗಿದ್ದಾರೆ. ರೋಹಿತ್ ಪಡೆ ಹೊಸ ವಾತಾವರಣಕ್ಕೆ ಹೊಂದಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.
143 ವರ್ಷಗಳ ಇತಿಹಾಸ ಹೊಂದಿರುವ ಓವಲ್‌ ಗ್ರೌಂಡ್‌ನಲ್ಲಿ ಇದೇ ಮೊದಲ ಬಾರಿಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಫೈನಲ್‌ ನಡೆಯುತ್ತಿದೆ. ಅಲ್ಲದೆ ಈ ಅಂಗಳದಲ್ಲಿ ಬೌಲರ್‌ಗಳಿಗೆ ಪಿಚ್‌ ಹೇಗೆ ವರ್ತಿಸುತ್ತದೆ ಎಂಬುದು ಇನ್ನೂ ಗೊತ್ತಾಗದ ಸಂಗತಿ.
ವಿಶೇಷ ಎಂದರೆ ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ ಟ್ರೋಫಿ ಗೆಲ್ಲುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾದರೆ ಇದುವರೆಗಿನ ಕ್ರಿಕೆಟ್ ಇತಿಹಾಸದಲ್ಲಿ ಯಾವ ತಂಡವೂ ಮಾಡಲಾಗದ ಅಪರೂಪದ ದಾಖಲೆಯೊಂದನ್ನು ಬರೆಯಲಿದೆ.

ಆಸೀಸ್ ವಿರುದ್ಧ ಭಾರತ ಟೆಸ್ಟ್ ಚಾಂಪಿಯನ್ಶಿಪ್ ಗೆದ್ದರೆ, ಏಕದಿನ, ಟಿ20 ಮತ್ತು ಟೆಸ್ಟ್ ಮೂರು ಮಾದರಿಗಳಲ್ಲಿ ವಿಶ್ವಕಪ್ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಜೊತೆಗೆ ಭಾರತ ತಂಡ 2013ರ ಬಳಿಕ ಒಂದೇ ಒಂದು ಐಸಿಸಿ ಟ್ರೋಫಿ ಗೆಲ್ಲದ ಬರವನ್ನು ನೀಗಿಸಿಕೊಳ್ಳಿದೆ.

ಹೀಗೆ ಸಾಕಷ್ಟು ರೋಚಕತೆ ಸೃಷ್ಟಿಸಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಈ ಹಿಂದಿನಂತೆ ಭಾರತದಲ್ಲಿ ಬೆಳಗಿನ ಜಾವ ಶುರುವಾಗುದಿಲ್ಲ. ಇಂಗ್ಲೆಂಡ್ನಲ್ಲಿ ಬೆಳಗ್ಗೆ 10:30ಕ್ಕೆ ಆರಂಭವಾದರೆ ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 3 ಗಂಟೆಗೆ ಶುರುವಾಗಲಿದೆ. 2:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್‌ ಪಂದ್ಯ ಸ್ಟಾರ್‌ ಸ್ಪೋರ್ಟ್ಸ್‌ ಟೆಲಿವಿಷನ್‌ ವಾಹಿನಿಯಲ್ಲಿ ನೇರ ಪ್ರಸಾರವಾಗಲಿದೆ. ಲೈವ್‌ ಸ್ಟ್ರೀಮಿಂಗ್‌ ಡಿಸ್ನಿ ಪ್ಲಸ್‌ ಹಾಟ್‌ ಸ್ಟಾರ್‌ ಮೊಬೈಲ್‌ ಅಪ್ಲಿಕೇಷನ್‌ನಲ್ಲಿ ನೋಡಬಹುದು. ಡಿಡಿ ದೂರದರ್ಶನದಲ್ಲೂ ನೇರಪ್ರಸಾರ ಕಾಣಲಿದೆ.