ಅರಬ್ಬಿ ಸಮುದ್ರದಲ್ಲಿ ಬಿಪರ್ಜಾಯ್ ಚಂಡಮಾರುತದ ಅಬ್ಬರ ಹೆಚ್ಚಾಗುತ್ತಿದ್ದು, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಕಟ್ಟೆಚ್ಚರವಹಿಸಲು ಸೂಚನೆ ನೀಡಲಾಗಿದೆ, ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜೂನ್ 11 ಹಾಗೂ 12 ರಂದು ಭಾರಿ ಮಳೆ ಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕೇರಳ, ಲಕ್ಷ ದ್ವೀಪ, ಗೋವಾ, ಮಹಾರಾಷ್ಟ್ರದಲ್ಲೂ ಭಾರಿ ಮಳೆ ಸಂಭವವಿದೆ. ಬಿಪರ್ಜಾಯ್ ಚಂಡಮಾರುತ ಅಬ್ಬರದಿಂದ ಬಿರಗಾಳಿ ಸಹಿತ ಮಳೆಯಾಗಲಿದೆ. ಅರಬ್ಬಿ ಸಮುದ್ರದಲ್ಲಿ ಗಂಟೆಗೆ 115 ಕಿ.ಮೀ. ವೇಗದ ಬಿರುಗಾಳಿ ಸಾಧ್ಯತೆ ಇದೆ. ಸಮುದ್ರಕ್ಕೆ ತೆರಳದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಸೂಚನೆ ನೀಡಿದ್ದಾರೆ.
ಚಿತ್ರದುರ್ಗ, ಕೋಲಾರ, ತುಮಕೂರು ಜಿಲ್ಲೆಗಳಲ್ಲೂ ಮಳೆಯ ಅಬ್ಬರ ಹೆಚ್ಚಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಮಳೆಯಾಗಲಿದೆ.
ಹೊಳೆಹೊನ್ನೂರು, ಚನ್ನರಾಯಪಟ್ಟಣ, ಶೋರಾಪುರದಲ್ಲಿ ಮಳೆಯಾಗಿದೆ. ಗರಿಷ್ಠ ಉಷ್ಣಾಂಶವು ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್ ಹಾಗೂ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 35-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಬೆಳಗ್ಗೆ ಬಿಸಿಲ ವಾತಾವರಣವಿರಲಿದ್ದು, ಕೆಲವು ಪ್ರದೇಶಗಳಲ್ಲಿ ಸಂಜೆ ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ 39.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.