ಜೂ.11ಕ್ಕೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನಗೆ ಚಾಲನೆ,ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭಾಗಿ!

ಬೆಂಗಳೂರು :  ಕರ್ನಾಟಕ ಕಾಂಗ್ರೆಸ್ ಸರ್ಕಾರದ ಉಚಿತ ಭಾಗ್ಯಗಳ ಪೈಕಿ ಜೂನ್ 11ರಿಂದ ಶಕ್ತಿ ಯೋಜನೆ ಜಾರಿಯಾಗುತ್ತಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಈ ಯೋಜನೆ ಚಾಲನೆಗೆ ಸರ್ಕಾರ ಭರ್ಜರಿ ತಯಾರಿ ನಡೆಸಿದೆ. ಭಾನುವಾರ(ಜೂ.11) ಶಕ್ತಿ ಯೋಜನೆಗೆ ವಿದ್ಯುಕ್ತ ಚಾಲನೆ ಸಿಗಲಿದೆ. ವಿಧಾನಸೌಧದ ಪೂರ್ವ ದ್ವಾರದ ಗ್ರ್ಯಾಂಡ್ ಸ್ಟೆಪ್ ಬಳಿ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ.

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಏಕ‌ಕಾಲಕ್ಕೆ ಚಾಲನೆ ನೀಡಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೇರಿದಂತೆ ಸರ್ಕಾರದ ಸಚಿವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. 

ಸರ್ಕಾರಿ ನೌಕರರು, ಮಹಿಳೆಯರು, ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ಪ್ರತಿಯೊಬ್ಬರಿಗೂ ಉಚಿತ ಪ್ರಯಾಣದ ಅವಕಾಶ ಕಲ್ಪಿಸಲಾಗುತ್ತಿದೆ. ಆದರೆ, ಎ.ಸಿ. ಸೌಲಭ್ಯದ ಬಸ್‌, ಎ.ಸಿ. ಹಾಗೂ ನಾನ್‌ ಎ.ಸಿ. ಸ್ಲೀಪರ್‌, ಐರಾವತ ಬಸ್‌ ಸೇರಿದಂತೆ ಸುಖಾಸೀನ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ. ಉಳಿದಂತೆ ಶೇ.94ರಷ್ಟುಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿದೆ.

ಆಧಾರ್‌ ಕಾರ್ಡ್‌, ಚುನಾವಣಾ ಆಯೋಗ ವಿತರಿಸಿರುವ ಮತದಾರರ ಗುರುತಿನ ಚೀಟಿ, ಚಾಲನಾ ಪರವಾನಗಿ ಪತ್ರ, ವಾಸಸ್ಥಳ ನಮೂದಿಸಿರುವ ಕೇಂದ್ರ ಸರ್ಕಾರದ ಇಲಾಖೆಗಳು, ಭಾರತ ಸರ್ಕಾರದ ಸಾರ್ವಜನಿಕ ವಲಯದ ಉದ್ದಿಮೆ, ಸಂಸ್ಥೆಗಳು ವಿತರಿಸಿರುವ ಗುರುತಿನ ಚೀಟಿ ಅಥವಾ ವಾಸಸ್ಥಳ ನಮೂದಿಸಿರುವಂತಹ ರಾಜ್ಯ ಸರ್ಕಾರದ ಇಲಾಖೆಗಳು, ಸಾರ್ವಜನಿಕ ವಲಯದ ಉದ್ದಿಮೆ, ಸಂಸ್ಥೆಗಳು ವಿತರಿಸಿರುವ ಗುರುತಿನ ಚೀಟಿ ಅಥವಾ ಅಂಗವಿಕಲರ ಮತ್ತು ಹಿರಿಯ ನಾಗರೀಕ ಕಲ್ಯಾಣ ನಿರ್ದೇಶನಾಲಯದವರು ವಿತರಿಸಿರುವ ಗುರುತಿನ ಚೀಟಿ ತೋರಿಸಿ ಉಚಿತವಾಗಿ ಪ್ರಯಾಣ ಮಾಡಬಹುದು.

ರಾಜ್ಯದ ಮಹಿಳೆಯರು ನಗರ ಸಾರಿಗೆ ಬಸ್‌ಗಳಲ್ಲಿ ಮಾತ್ರವಲ್ಲದೆ ಬೆಂಗಳೂರಿನಿಂದ ಬೀದರ್‌ವರೆಗೆ ಎಲ್ಲಿ ಬೇಕಾದರಲ್ಲಿಗೆ ಉಚಿತವಾಗಿ ಪ್ರಯಾಣಿಸಬಹುದು. ಆದರೆ, ಹೊರ ರಾಜ್ಯದ ತಿರುಪತಿ, ತಿರುವನಂತಪುರಂ, ಹೈದರಾಬಾದ್‌, ಚೆನ್ನೈಗೆ ಉಚಿತವಾಗಿ ಪ್ರಯಾಣಿಸಲು ಅವಕಾಶವಿಲ್ಲ.

ವಿಶೇಷ ಎಂದರೆ ಇನ್ನು ಮುಂದೆ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯವಿರುವ ರಾಜ್ಯ ಸರ್ಕಾರಿ ಸ್ವಾಮ್ಯದ ಎಲ್ಲಾ ಬಸ್‌ಗಳಲ್ಲಿನ ಶೇಕಡ 50 ರಷ್ಟುಆಸನಗಳು ಪುರುಷರಿಗೆ ಮೀಸಲಾಗಲಿವೆ. ಹಣ ತೆತ್ತು ಪ್ರಯಾಣಿಸುವ ಗಂಡಸರಿಗೂ ನ್ಯಾಯ ಒದಗಿಸಬೇಕಲ್ಲವೇ? ಹೀಗಾಗಿ ಈ ಮೀಸಲು ಎಂದು ಸಿದ್ದರಾಮಯ್ಯ ಹಾಸ್ಯಧಾಟಿಯಲ್ಲಿ ಈ ಮಾಹಿತಿ ನೀಡಿದರು. ಆದರೆ, ಈ ನಿಯಮ ಬಿಎಂಟಿಸಿ ಬಸ್‌ಗಳಿಗೆ ಅನ್ವಯವಾಗುವುದಿಲ್ಲ ಎಂದೂ ಅವರು ತಿಳಿಸಿದರು.