ಚಿಕ್ಕಬಳ್ಳಾಪುರ (ಜೂ.12): ರಾಜ್ಯದಲ್ಲಿ ಈಗಾಗಲೇ ಮೊದಲ ಗ್ಯಾರಂಟಿಯನ್ನು ಭಾನುವಾರ ಜಾರಿಗೊಳಿಸಿದ ಕಾಂಗ್ರೆಸ್ ಸರ್ಕಾರಕ್ಕೆ ಮೆಚ್ಚುಗೆ ಮಹಾಪೂರವೇ ವ್ಯಕ್ತವಾಗುತ್ತಿದೆ. ಇನ್ನು ಕಾಂಗ್ರೆಸ್ 2ನೇ ಗ್ಯಾರಂಟಿಯಾಗಿ ಅನ್ನಭಾಗ್ಯ ಯೋಜನೆಯನ್ನು ಜು.1ರಿಂದ ಜಾರಿಗೆ ತರಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ 2ನೇ ಗ್ಯಾರಂಟಿಗೆ ಚಾಲನೆ ನೀಡಲಾಗುತ್ತದೆ.
ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಅವರು, ಜುಲೈ 1 ರಂದು ಮತ್ತೊಂದು ಗ್ಯಾರಂಟಿ ಯೋಜನೆ ಜಾರಿ ಮಾಡಲಾಗುತ್ತದೆ. ಮೈಸೂರಿನಲ್ಲಿ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಲಾಗುವುದು. ಜುಲೈ 1 ರಂದು ರಾಜ್ಯದ ಎಲ್ಲ ಅರ್ಹ ಫಲಾನುಭವಿಗಳಿಗೆ 10 ಕೆಜಿ ಉಚಿತ ನೀಡುವ ಗ್ಯಾರಂಟಿ ಯೋಜನೆಗೆ ಚಾಲನೆ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆಗಳನ್ನು ನಾನೇ ನೋಡಿಕೊಳ್ಳುತ್ತಿದ್ದೇನೆ ಎಂದು ಮಾಹಿತಿ ನೀಡಿದರು.