ಪಿಎಸ್‌ಐ ಅಕ್ರಮ ಆರೋಪಿಗಳನ್ನು ಬಿಟ್ಟು ನೇಮಕಾತಿ ಮುಂದುವರೆಸಲು ಸಾಧ್ಯವೇ? ಸರ್ಕಾರಕ್ಕೆ ಹೈಕೋರ್ಟ್‌ ಪ್ರಶ್ನೆ

ಬೆಂಗಳೂರು (ಜೂ.15): ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ ಆರೋಪಿಗಳನ್ನು ಬಿಟ್ಟು ಉಳಿದ ಅಭ್ಯರ್ಥಿಗಳಿಗೆ ನೇಮಕಾತಿ ಪ್ರಕ್ರಿಯೆ ಮುಂದುವರೆಸಲು ಸಾಧ್ಯವೇ ಎಂದು ಹೂಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಮಾಡಲಾಗಿದೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ 545 ಪಿಎಸ್ಐ ನೇಮಕಾತಿಯಲ್ಲಿನ ಅಕ್ರಮ ಪ್ರಕರಣದಲ್ಲಿ ಹಲವು ಆರೋಪಿಗಳು ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ. ಆದರೆ, ಯಾವುದೇ ಅಕ್ರಮವೆಸಗದೇ ಪರೀಕ್ಷೆಯನ್ನು ಬರೆದು ಉತ್ತೀರ್ಣರಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಮತ್ತೊಮ್ಮೆ ಪರೀಕ್ಷೆ ಮಾಡದೇ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಬೇಕು ಎಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿಯನ್ನು ವಿಚಾರಣೆ ಮಾಡಿದ ಹೈಕೋರ್ಟ್‌ ವಿಭಾಗೀಯ ಪೀಠವು ಪಿಎಸ್‌ಐ ನೇಮಕಾತಿ ಪರೀಕ್ಷೆಯನ್ನು ಅಕ್ರಮವನ್ನು ನಡೆಸಿ ಬಂಧಿತವಾದ ಆರೋಪಿಗಳನ್ನ ಬಿಟ್ಟು , ಉಳಿದ ಅಭ್ಯರ್ಥಿಗಳಿಗೆ ನೇಮಕ ಪ್ರಕ್ರಿಯೆ ನಡೆಸಲು ಸಾಧ್ಯವೇ.? ಎಂದು ರಾಜ್ಯ ಸರ್ಕಾರಕ್ಕೆ ನ್ಯಾಯಾಲಯವು ಪ್ರಶ್ನೆ ಮಾಡಿದೆ.