ಶಿರಸಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ಇ.ಡಿ ವಿಚಾರಣೆ ಖಂಡಿಸಿ ಶಿರಸಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಕೆ ಹರಿಪ್ರಸಾದ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಬಸ್ ನಿಲ್ದಾಣ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಪರಿಷತ್ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್, ಇಡಿಯನ್ನು ದುರ್ಬಳಕೆ ಮಾಡಿಕೊಂಡು ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರ ವಿರುದ್ಧ ದ್ವೇಷ ರಾಜಕಾರಣ ಮಾಡುತ್ತಿದೆ. ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ವಿರುದ್ಧವಾಗಿ ಬಿಜೆಪಿ ಆಡಳಿತ ನಡೆಸುತ್ತಿದೆ. ದೇಶದ ಸಮಸ್ಯೆಗಳನ್ನು ಪರಿಹರಿಸುವುದು ಬಿಟ್ಟು ನ್ಯಾಶನಲ್ ಹೆರಾಲ್ಡ್ ಪ್ರಕರಣವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ರಮಾನಂದ ನಾಯಕ, ಶಾರದಾ ಶೆಟ್ಟಿ, ರವೀಂದ್ರ ನಾಯ್ಕ ಸೇರಿದಂತೆ ಅನೇಕರು ಹಾಜರಿದ್ದರು.