ಚಿಕ್ಕಮಗಳೂರು: ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಮತ್ತಷ್ಟು ವಿಳಂಬ ಆಗುತ್ತೆ. ಬಹಳ ಸರಳವಾಗಿ ಗೃಹಲಕ್ಷ್ಮೀ ಯೋಜನೆ ಜನರಿಗೆ ತಲುಪಬೇಕೆಂದು ಯೋಜನೆಯಲ್ಲಿ ಕೆಲವು ಬದಲಾವಣೆಳಗಳನ್ನು ಮಾಡಲಾಗುತ್ತಿದೆ. ಅಧಿಕಾರಿಗಳಿಗೆ ಕೆಲ ಬದಲಾವಣೆ ಮಾಡಲು ಸೂಚನೆ ನೀಡಿದ್ದೇವೆ. ಮೊದಲು ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಇದೀಗ ಇದರ ಜೊತೆಗೆ ಗ್ರಾಮ ಪಂಚಾಯಿತಿಯಲ್ಲಿನ ಬಾಪೂಜಿ ಸೇವಾ ಕೇಂದ್ರದಲ್ಲೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಹೀಗಾಗಿ ಅರ್ಜಿ ಸಲ್ಲಿಸಲು ವಿಳಂಬವಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಚಿಕ್ಕಮಗಳೂರಿನ ಗೌರಿಗದ್ದೆ ಆಶ್ರಮದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸರ್ಕಾರದ ಯೋಜನೆಯನ್ನ ಯಾರು ಮನೆ ಮನೆ ಮುಟ್ಟಿಸಲು ಪ್ರಜಾ ಪ್ರತಿನಿಧಿ ಆರಂಭಿಸುತ್ತಿದ್ದೇವೆ. ಈಗಾಗಲೆ ಅಧಿಕಾರಿಗಳು ಸಾಫ್ಟ್ವೇರ್/ಅಪ್ಲಿಕೇಶನ್ ಅನ್ನು ಅಭಿವೃದ್ಧಿ ಪಡಿಸುತ್ತಿದ್ದಾರೆ. ಅತ್ಯಂತ ಶೀಘ್ರದಲ್ಲೇ ಅರ್ಜಿ ಪ್ರಕ್ರಿಯೆ ಆರಂಭವಾಗುತ್ತದೆ. ಆಗಸ್ಟ್ 17 ಅಥವಾ 18ರಂದು ಮನೆ ಯಜಮಾನಿ ಖಾತೆಗೆ ಹಣ ತಲಪುತ್ತದೆ ಎಂದು ತಿಳಿಸಿದರು.
ಇದಕ್ಕೂ ಮುನ್ನ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜಿಲ್ಲೆಯ ಕೊಪ್ಪ ತಾಲೂಕಿನ ವಿನಯ ಗುರೂಜಿ ಅವರ ಗೌರಿಗದ್ದೆ ಆಶ್ರಮದಲ್ಲಿ ಮಳೆಗಾಗಿ ಚಂಡಿಕಾಯಾಗ ನಡೆಸಿದರು. ಚಂಡಿಕಾಯಾಗದ ಪೂರ್ಣಾಹುತಿಯಲ್ಲಿ ಸಚಿವ ಡಿ.ಸುಧಾಕರ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ಶಾಸಕರು ಭಾಗಿಯಾಗಿದ್ದರು.
ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪ್ರಮುಖ ಅಂಶಗಳು:
- ಅರ್ಜಿದಾರರು 16-06-2023 ರಿಂದ ಅರ್ಜಿ ಸಲ್ಲಿಸಬಹುದಾಗಿರುತ್ತದೆ
- ಅರ್ಜಿಗಳನ್ನು ಆನ್‌ಲೈನ್ ಮೂಲಕ ಅಥವಾ ಭೌತಿಕವಾಗಿ ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದಾಗಿದೆ (https://sevasindhugs.karnataka.gov.in/gruhalakshmi)
- ಅರ್ಜಿ ಸಲ್ಲಿಕೆಗೆ SMS ಮೂಲಕ ಹಾಗೂ ಸೇವಾಸಿಂಧು ಪೋರ್ಟಲ್ ಮೂಲಕ Auto generated ಸ್ವೀಕೃತಿಗಳನ್ನು ಪಡೆಯಬಹುದಾಗಿದೆ.
- ಅರ್ಜಿ ಸಲ್ಲಿಸಲು ಅರ್ಜಿದಾರರ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ ಮೊಬೈಲ್ ಸಂಖ್ಯೆ ಹಾಗೂ ಅರ್ಜಿದಾರರ ಬ್ಯಾಂಕ್ ಖಾತೆ ವಿವರಗಳು ಅಗತ್ಯವಾಗಿರುತ್ತದೆ.
- ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ, ಸಂಪೂರ್ಣ ಉಚಿತವಾಗಿದ್ದು, ಅರ್ಜಿದಾರರು ಮಧ್ಯವರ್ತಿಗಳ ಮೇಲೆ ಅವಲಂಬಿತರಾಗದೆ ಅರ್ಜಿಯನ್ನು ಸ್ವತ ಮೇಲೆ ತಿಳಿಸಿದ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿರುತ್ತದೆ.
- ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಯೋಜನೆಯ ಕುರಿತಂತೆ ಸಂದೇಹ/ ಕುಂದುಕೊರತೆಗಳಿದ್ದಲ್ಲಿ ಸಹಾಯವಾಣಿ (Helpline) – 1902 ಗೆ ಸಂಪರ್ಕಿಸಬಹುದಾಗಿದೆ