ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆಯೇ ಮಳೆರಾಯನ ಆಗಮನವಾಗಿದ್ದು, ನಗರದ ಹಲವೆಡೆ ಭಾರೀ ಮಳೆಯಾಗಿದೆ. ಭಾರೀ ಮಳೆಯ ಪರಿಣಾಮ ವಾಹನ ಸವಾರರು ಸಂಚರಿಸಲು ರಸ್ತೆ ಕಾಣಿಸದೆ ಪರದಾಡಿದ್ದಾರೆ.
ಚೆನ್ನೈನಲ್ಲಿ ಮೇಲ್ಮೈ ಸುಳಿಗಾಳಿಯ ಪರಿಣಾಮ ಸಿಲಿಕಾನ್ ಸಿಟಿಯಲ್ಲಿ ಮುಂದಿನ 3 ಗಂಟೆಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಅದೇ ರೀತಿ ಬೆಂಗಳೂರಿನಲ್ಲಿ ಮಳೆ ಪ್ರಾರಂಭವಾಗಿದ್ದು, ಹಲವೆಡೆ ಭಾರೀ ಪ್ರಮಾಣದ ಮಳೆಯಾಗಿದೆ. ವಿಧಾನಸೌಧದ ಸುತ್ತಮುತ್ತ ಭಾರೀ ಮಳೆಯಾಗಿದ್ದು, ನಗರದ ಮೌರ್ಯ ಸರ್ಕಲ್, ಕೆಆರ್ ಸರ್ಕಲ್, ಶಿವಾನಂದ ಸರ್ಕಲ್, ರೇಸ್ ಕೋರ್ಸ್, ಮೆಜೆಸ್ಟಿಕ್, ಫ್ರೀಡಂ ಪಾರ್ಕ್, ಕಾರ್ಪೊರೇಷನ್ ಸರ್ಕಲ್ ಸೇರಿದಂತೆ ಹಲವೆಡೆ ಮಳೆಯಾಗಿದೆ.
ಸದಾಶಿವನಗರದಲ್ಲಿ ಗುಡುಗು ಸಹಿತ ಜೋರು ಮಳೆಯಾಗಿದೆ. ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆ ಬೆಳಗ್ಗೆ 8 ಗಂಟೆಗೆ ಮನೆಯಿಂದ ಹೊರಡಬೇಕಿದ್ದ ಡಿಕೆ ಶಿವಕುಮಾರ್ ಮಳೆಯಿಂದಾಗಿ ಮನೆಯಲ್ಲಿಯೇ ಉಳಿದಿದ್ದಾರೆ. 11 ಗಂಟೆಗೆ ಕಾಂಗ್ರೆಸ್ ಪ್ರತಿಭಟನೆ ನಿಗದಿಯಾಗಿದ್ದು, ಇಲ್ಲಿಯವರೆಗೂ ಡಿಕೆಶಿ ಮನೆಯ ಮುಂದೆ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸುಳಿದಿಲ್ಲ.
ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಮಲ್ಲೇಶ್ವರಂನಲ್ಲಿ ಧಾರಾಕಾರ ಮಳೆಯಾಗಿದ್ದು, ರಸ್ತೆಯಲ್ಲಿ ವಾಹನ ಸವಾರರು ಪರದಾಡುತ್ತಿದ್ದಾರೆ. ಮಳೆಯ ಹಿನ್ನೆಲೆ ರಸ್ತೆ ಕಾಣಿಸದೆ ವಾಹನಗಳು ನಿಧಾನಗತಿಯಲ್ಲಿ ಸಂಚರಿಸುತ್ತಿವೆ. ಜೂನ್ 21ರಂದು ಬೆಳಗ್ಗೆಯವರೆಗೆ ರಾಜ್ಯದಲ್ಲಿ ಮಳೆಯ ಮುನ್ಸೂಚನೆ ನೀಡಿದ್ದು, ಮುಂದಿನ 5 ದಿನಗಳ ಕಾಲ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ 48 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರೆಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಹಾಸನ ಮತ್ತು ರಾಮನಗರ ಜಿಲ್ಲೆಗಳಿಗೆ ಬಿರುಗಾಳಿ ಸಹಿತ ಮಳೆಯ ಎಚ್ಚರಿಕೆ ನೀಡಿದ್ದು, ಗಾಳಿಯ ವೇಗವು ಗಂಟೆಗೆ 30ರಿಂದ 40 ಕಿಲೋಮೀಟರ್ ಇರುವ ಸಾಧ್ಯತೆಯಿದೆ. ಬಿಪರ್‌ಜಾಯ್ ಚಂಡಮಾರುತದಿಂದ ಪ್ರಭಾವಗೊಂಡಿದ್ದ ಮುಂಗಾರು ಮತ್ತೆ ಚುರುಕಾಗಿದೆ. ಸೈಕ್ಲೋನ್ ಪರಿಣಾಮ ದೊಡ್ಡ ಅಲೆಗಳು ಸಮುದ್ರ ತೀರಕ್ಕೆ ಬಂದು ಅಪ್ಪಳಿಸುತ್ತಿವೆ.