ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಗೆದ್ದ ನೀರಜ್: ಅಭಿನಂದಿಸಿದ ಪ್ರಧಾನಿ

ನವದೆಹಲಿ: ನೀರಜ್ ಚೋಪ್ರಾ ತಮ್ಮ ಯಶಸ್ಸಿನ ಓಟ ಮುಂದುವರಿಸಿದ್ದು, ಭಾನುವಾರ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಪುರುಷರ ಜಾವಲಿನ್ ಥ್ರೋ ಫೈನಲ್ ಸ್ಪರ್ಧೆಯಲ್ಲಿ ಎರಡನೇ ಸ್ಥಾನದೊಂದಿಗೆ ಬೆಳ್ಳಿ ಪದಕ ಗೆದ್ದಿದ್ದಾರೆ.

4ನೇ ಎಸೆತದಲ್ಲಿ 88.13 ಮೀಟರ್ ಎಸೆಯುವುದರ ಮೂಲಕ ಬೆಳ್ಳಿ ಪದಕ ತಮ್ಮದಾಗಿಸಿಕೊಂಡ ನೀರಜ್, ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಜಯಿಸಿದ ಎರಡನೇ ಭಾರತೀಯ ಕ್ರೀಡಾಪಟುವಾಗಿದ್ದಾರೆ. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಮೊದಲ ಬೆಳ್ಳಿ ಪದಕ ಗೆದ್ದ ಕ್ರೀಡಾಪಟು ಎಂಬ ದಾಖಲೆಯನ್ನೂ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮೋದಿ, ನಮ್ಮ ಅತ್ಯಂತ ಪ್ರತಿಷ್ಠಿತ ಕ್ರೀಡಾಪಟು ಉತ್ತಮ ಸಾಧನೆ ಮಾಡಿದ್ದಾರೆ. ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಐತಿಹಾಸಿಕ ಬೆಳ್ಳಿ ಪದಕವನ್ನು ಗೆದ್ದಿದ್ದಕ್ಕಾಗಿ ನೀರಜ್ ಚೋಪ್ರಾ ಅವರಿಗೆ ಅಭಿನಂದನೆಗಳು. ಇದು ಭಾರತೀಯ ಕ್ರೀಡೆಗಳಿಗೆ ವಿಶೇಷ ಕ್ಷಣವಾಗಿದೆ ಎಂದು ಹೇಳಿದ್ದಾರೆ.

ಶುಕ್ರವಾರ ನಡೆದ ಅರ್ಹತಾ ಸುತ್ತಿನಲ್ಲಿ 88.39 ಮೀಟರ್ ಜಾವಲಿನ್ ಥ್ರೋ ಮಾಡುವ ಮೂಲಕ ಫೈನಲ್‌ಗೆ ನೀರಜ್ ಅರ್ಹತೆ ಪಡೆದಿದ್ದರು. ಆದರೆ ಫೈನಲ್ ಪಂದ್ಯದಲ್ಲಿ ಎರಡನೇ ಸ್ಥಾನದೊಂದಿಗೆ ಬೆಳ್ಳಿ ಪದಕ ಜಯಿಸುವ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ಇನ್ನು ಆಂಡರ್ಸನ್ ಪೀಟರ್ 90.14 ಮೀಟರ್ ಎಸೆಯುವುದರೊಂದಿಗೆ ಚಿನ್ನದ ಪದಕ ಗೆದ್ದಿದ್ದಾರೆ.