ನವದೆಹಲಿ: 15 ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರ ಅಧಿಕಾರ ಸ್ವೀಕಾರ ಸಮಾರಂಭ ಜು.25 ರಂದು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಯಾರ್ಯಾರು ಭಾಗಿಯಾಗಲಿದ್ದಾರೆ.?
ಕಾರ್ಯಕ್ರಮದಲ್ಲಿ ರಾಜ್ಯಸಭೆ ಅಧ್ಯಕ್ಷ ಎಂ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಭಾಗವಹಿಸಲಿದ್ದಾರೆ. ಇನ್ನು ಸಮಾರಂಭದಲ್ಲಿ ಮಂತ್ರಿ ಪರಿಷತ್ತಿನ ಸದಸ್ಯರು, ರಾಜ್ಯ ಗವರ್ನರ್‌ಗಳು, ಮುಖ್ಯಮಂತ್ರಿಗಳು, ರಾಜತಾಂತ್ರಿಕ ನಿಯೋಗಗಳ ಮುಖ್ಯಸ್ಥರು, ಸಂಸತ್ತಿನ ಸದಸ್ಯರು ಮತ್ತು ಭಾರತ ಸರ್ಕಾರದ ಪ್ರಧಾನ ನಾಗರಿಕ ಮತ್ತು ಮಿಲಿಟರಿ ಅಧಿಕಾರಿಗಳು ಕೂಡ ಪಾಲ್ಗೊಳ್ಳಲಿದ್ದಾರೆ.
ಪ್ರಮಾಣವಚನ ಸ್ವೀಕಾರ ಸಮಾರಂಭ ಹೇಗಿರಲಿದೆ.?
ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ರಾಷ್ಟ್ರಪತಿಯಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಅವರು ಮೆರವಣಿಗೆಯಲ್ಲಿ ಸೆಂಟ್ರಲ್ ಹಾಲ್ ಪ್ರವೇಶಿಸಲಿದ್ದಾರೆ. ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಳಿಕ ರಾಷ್ಟ್ರಪತಿಗಳು ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.