ಚಿಕ್ಕಬಳ್ಳಾಪುರ: ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಹಿನ್ನೆಲೆಯಲ್ಲಿ ಭಾನುವಾರ (ಇಂದು) ವಿಶ್ವವಿಖ್ಯಾತ ನಂದಿಗಿರಿಧಾಮ ಹಾಗೂ ಸ್ಕಂದಗಿರಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿದ್ದ ಜಿಲ್ಲಾಡಳಿತದ ಆದೇಶದಲ್ಲಿ ಬದಲಾವಣೆ ಮಾಡಲಾಗಿದೆ.
ಭಾನುವಾರ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಸೋಮವಾರ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಹಾಗೂ ಎಸ್ಪಿ ನಾಗೇಶ್ ‘ಪಬ್ಲಿಕ್ ಟಿವಿ’ಗೆ ಸ್ಪಷ್ಟನೆ ನೀಡಿದ್ದಾರೆ.
ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮಕ್ಕೆ ರಾಷ್ಟ್ರಪತಿಗಳು ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಭದ್ರತಾ ಹಿತದೃಷ್ಟಿಯಿಂದ 2 ದಿನ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಆದರೆ ಈಗ ಸಾರ್ವಜನಿಕರು ಹಾಗೂ ಪ್ರವಾಸಿಗರ ಒತ್ತಡಕ್ಕೆ ಮಣಿದ ಜಿಲ್ಲಾಡಳಿತ ಪ್ರವಾಸಿಗರಿಗೆ ಅವಕಾಶ ಕಲ್ಪಿಸಿದೆ. ಅಲ್ಲದೇ ಸೋಮವಾರ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ.