ಲೋಕಸಭೆ ಚುನಾವಣೆಗೆ ಸ್ಪರ್ಧೆ: ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಿಷ್ಟು

ಬೆಳಗಾವಿ(ಜು.02):  ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಹೊಸಬರಿಗೆ ಅವಕಾಶ ನೀಡಲಾಗುವುದು ಎಂದು ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಕ್ಕೋಡಿ, ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಅಭ್ಯರ್ಥಿಗಳನ್ನು ಹುಡುಕಲಾಗುತ್ತಿದೆ. ಬೆಂಗಳೂರಿನಲ್ಲಿ ಶಾಸಕರ ಸಭೆ ಮಾಡುತ್ತೇವೆ. ಯೋಗ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದರು.

ಮಂತ್ರಿ ಆದರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದಿದ್ದೆ. ನಮ್ಮ ಸರ್ಕಾರ ಬರದಿದ್ದರೆ ಸ್ಪರ್ಧೆ ಮಾಡುತ್ತೇನೆ. ಇಲ್ಲದಿದ್ದರೆ ಇಲ್ಲ ಎಂದು ಹೇಳಿದ್ದೆ. ಹಾಗಾಗಿ, ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದರು.
ವ್ಯಾಕ್ಸಿನ್‌ ಡಿಪೋದಲ್ಲಿ ನಡೆದ ಅಕ್ರಮದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ವ್ಯಾಕ್ಸಿನ್‌ ಡಿಪೋದಲ್ಲಿ ಸ್ಮಾರ್ಟ ಸಿಟಿ ಕಾಮಗಾರಿ ಆರಂಭಿಸಲು ಆರೋಗ್ಯ ಇಲಾಖೆಯಿಂದ ಯಾವುದೇ ರೀತಿಯ ಪರವಾನಿಗೆ ನೀಡಿರುವುದಿಲ್ಲ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಕೇವಲ ಹೆರಿಟೇಜ್‌ ಪಾರ್ಕ್‌ ಅಭಿವೃದ್ಧಿಪಡಿಸಲು ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ. ಆದರೆ ಅಲ್ಲಿ ಮರಗಳನ್ನು ಕಡಿದು ಅಕ್ರಮ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದ್ದು, ಈ ಕುರಿತು ತನಿಖೆ ಕೈಗೊಂಡು ಗೊಂದಲಕ್ಕೆ ಸ್ಪಷ್ಟೀಕರಣ ನೀಡಬೇಕೆಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದ ಅವರು, ಕಾಮಗಾರಿಗಳಲ್ಲಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಬೆಳಗಾವಿ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಇಲ್ಲ., ಇನ್ನೂ ಎರಡು ತಿಂಗಳಿಗೆ ಆಗುವಷ್ಟುನೀರು ಹಿಡಕಲ್‌ ಡ್ಯಾಮ್‌ ನಲ್ಲಿ ಸಂಗ್ರಹ ಇದೆ. ಈಗಾಗಲೇ ನೀರು ಕೂಡ ಬರುತ್ತಿದೆ ಎಂದು ಹೇಳಿದರು.