ನವದೆಹಲಿ: ಎಸ್‌ಸಿಒ ರಾಷ್ಟ್ರಗಳ ನಾಯಕರ ಸಭೆಯಲ್ಲಿ ಭಯೋತ್ಪಾದನೆ ವಿಚಾರವಾಗಿ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಉಪಸ್ಥಿತಿಯಲ್ಲೇ ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಟಾಂಗ್ ಕೊಟ್ಟಿದ್ದಾರೆ.
ಭಯೋತ್ಪಾದಕ ಚಟುವಟಿಕೆಗಳನ್ನು ಎದುರಿಸುವಲ್ಲಿ ಯಾವುದೇ ದ್ವಂದ್ವ ನೀತಿ ಇರಬಾರದು. ಗಡಿಯಾಚೆಗಿನ ಭಯೋತ್ಪಾದನೆಯನ್ನು ಬೆಂಬಲಿಸುವ ರಾಷ್ಟ್ರಗಳನ್ನು ಟೀಕಿಸಲು ಬಣ ಹಿಂಜರಿಯಬಾರದು ಎಂದು ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ವರ್ಚುವಲ್ ಶೃಂಗಸಭೆಯಲ್ಲಿ ಮೋದಿ ಪಾಕಿಸ್ತಾನಕ್ಕೆ ತಿರುಗೇಟು ನೀಡಿದ್ದಾರೆ.
ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಶರೀಫ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ರಷ್ಯಾದ ವ್ಲಾಡಿಮಿರ್ ಪುಟಿನ್ ಅವರ ಮಾತುಗಳನ್ನು ಆಲಿಸಿದ ಪ್ರಧಾನಿ ಮೋದಿ, ಭಯೋತ್ಪಾದನೆ ಮತ್ತು ಭಯೋತ್ಪಾದನೆಗೆ ಹಣಕಾಸಿನ ನೆರವು ನೀಡುವುದನ್ನು ಎದುರಿಸಲು ನಿರ್ಣಾಯಕ ಕ್ರಮದ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಭಯೋತ್ಪಾದನೆಯು ಪ್ರಾದೇಶಿಕ ಮತ್ತು ಜಾಗತಿಕ ಶಾಂತಿಗೆ ಬೆದರಿಕೆಯಾಗಿದೆ. ಇಂತಹ ಗುಂಪುಗಳ ಬೆದರಿಕೆಯನ್ನು ಎದುರಿಸಲು ಪರಸ್ಪರ ಸಹಕಾರವನ್ನು ವಿಸ್ತರಿಸಬೇಕು ಎಂದು ಜಾಗತಿಕ ರಾಷ್ಟ್ರಗಳಿಗೆ ಕರೆ ನೀಡಿದ್ದಾರೆ.
ಭಯೋತ್ಪಾದನೆ ವಿರುದ್ಧ ನಾವು ಒಟ್ಟಾಗಿ ಹೋರಾಡೋಣ. ಅದು ಯಾವುದೇ ಸ್ವರೂಪದಲ್ಲೇ ಇರಲಿ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಯಾವುದೇ ದ್ವಂದ್ವ ನಿಲುವು ಇರಬಾರದು ಎಂದು ಹೇಳಿದ್ದಾರೆ.
ಭಾರತದ ಅಧ್ಯಕ್ಷತೆಯಲ್ಲಿ ನಡೆದ ವರ್ಚುವಲ್ ಶೃಂಗಸಭೆಯಲ್ಲಿ ಕಝಾಕಿಸ್ತಾನ್, ಕಿರ್ಗಿಸ್ತಾನ್, ತಜಕಿಸ್ತಾನ್, ಉಜ್ಬೇಕಿಸ್ತಾನ್ ಮತ್ತು ಇರಾನ್ ನಾಯಕರು ಭಾಗವಹಿಸಿದ್ದರು. ಶೃಂಗಸಭೆಯ ಅಧ್ಯಕ್ಷತೆ ವಹಿಸಿ ಪ್ರಧಾನಿ ಮೋದಿ ಅವರು ವಿವಿಧ ಜಾಗತಿಕ ಸವಾಲುಗಳ ಬಗ್ಗೆ ಮಾತನಾಡಿದ್ದಾರೆ.