ನವದೆಹಲಿ: ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ರಾಷ್ಟ್ರ ರಾಜಧಾನಿ ಜನರಿಗೆ ವರುಣದೇವ ತಂಪೆರಿದಿದ್ದಾನೆ. ದೆಹಲಿ ಸೇರಿದಂತೆ ಸುತ್ತಮುತ್ತಲಿನ ಎನ್‍ಸಿಆರ್ ಭಾಗದಲ್ಲಿ ಭಾರೀ ಮಳೆಯಾಗಿದೆ. ಮಳೆಯ ಪರಿಣಾಮ ರಸ್ತೆಗಳಲ್ಲಿ ನೀರು ತುಂಬಿಕೊಂಡು ವಾಹನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.
ದೆಹಲಿಯ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾದರೆ, ಇನ್ನೂ ಕೆಲವು ಪ್ರದೇಶಗಳಲ್ಲಿ ಜೋರು ಮಳೆಯಾಗಿದೆ. ಬುಧವಾರದಿಂದ 5 ಮಿ.ಮೀ ಮಳೆ ದಾಖಲಾಗಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಮುಂದಿನ ಕೆಲವು ದಿನಗಳವರೆಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಉತ್ತರ ಪ್ರದೇಶದ ಗಾಜಿಯಾಬಾದ್‍ನಲ್ಲೂ ಭಾರೀ ಮಳೆಯಾಗಿದ್ದು, ನಗರದ ಕೆಲವು ಭಾಗಗಳಲ್ಲಿ ಜಲಾವೃತಗೊಂಡು ಟ್ರಾಫಿಕ್ ಜಾಮ್‍ಗೆ ಕಾರಣವಾಯಿತು. ದೆಹಲಿ, ಎನ್‍ಸಿಆರ್, ಸೋನಿಪತ್, ಖಾರ್ಖೋಡಾ, ಬರೌತ್, ಬಾಗ್ಪತ್, ಮೀರತ್, ಖೇಕ್ರಾ, ಮೋದಿನಗರ ಸೇರಿದಂತೆ ಅನೇಕ ಪ್ರದೇಶಗಳಲ್ಲಿ 30-40 ಕಿಮೀ/ಗಂ ವೇಗದಲ್ಲಿ ಗುಡುಗು, ರಭಸ ಗಾಳಿ ಸಹಿತ ಲಘು ಮಳೆಯಾಗಲಿದೆ.
ದೆಹಲಿಯ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸುರಿದಿದ್ದು, ಮುಂದಿನ ಕೆಲವು ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 36 ಡಿಗ್ರಿ ಸೆಲ್ಸಿಯಸ್ ಮತ್ತು 25 ಡಿಗ್ರಿ ಸೆಲ್ಸಿಯಸ್‍ನಲ್ಲಿ ನೆಲೆಗೊಳ್ಳುವ ನಿರೀಕ್ಷೆಯಿದೆ ಇದೆ ದೆಹಲಿ ಹವಾಮಾನ ಇಲಾಖೆ ತಿಳಿಸಿದೆ.