ಕಾರವಾರ: 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ದೇಶದಲ್ಲಿ ಹರ್ ಘರ್ ತಿರಂಗಾ ಅಭಿಯಾನವನ್ನು ಆಗಸ್ಟ್ 13 ರಿಂದ 15 ರವರೆಗೆ ಹಮ್ಮಿಕೊಳ್ಳಲಾಗುತ್ತಿದ್ದು, ಈ ದಿನಗಳಂದು ಜಿಲ್ಲೆಯಲ್ಲಿರುವ ಎಲ್ಲಾ ಮನೆಗಳು, ಸರ್ಕಾರಿ ಕಚೇರಿ, ಸಂಘ ಸಂಸ್ಥೆಗಳ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಕಳೆದ 2 ವರ್ಷದಲ್ಲಿ ಕೋವಿಡ್ ಕಾರಣಗಳಿಂದ ಸರಳವಾಗಿ ಸ್ವಾತಂತ್ರ್ಯೋತ್ಸವವನ್ನು ಆಚರಣೆ ಮಾಡಲಾಗಿತ್ತು. ಆದರೆ ಈ ವರ್ಷ 75ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಬೇಕು ಹಾಗೂ ಜಿಲ್ಲೆಯ ಸರಕಾರಿ, ಅರೆ ಸರಕಾರಿ ಶಾಲಾ, ಕಾಲೇಜು ಮತ್ತು ಸ್ಥಳೀಯ ಸಂಸ್ಥೆಯವರು ಅವರವರ ಕಚೇರಿಯಲ್ಲಿ ಧ್ವಜಾರೋಹಣ ನೇರವರಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.
ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ನಡೆಯುವುದರಿಂದ ಆಸನಗಳು, ಉಪಹಾರ ಹಾಗೂ ಮಳೆಯಿರುವುದರಿಂದ ಶಾಮಿಯಾನ ವ್ಯವಸ್ಥೆ ಹಾಗೂ ಎನ್.ಸಿ.ಸಿ, ಗೃಹರಕ್ಷಕ, ಪಾರೆಸ್ಟ್ ಇನ್ನಿತರ ತಂಡಗಳಿಂದ ಮಾರ್ಚ್ಪಾಸ್ಟ್ ಹಾಗೂ ವಿವಿಧ ಶಾಲಾ, ಕಾಲೇಜುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪಟ್ಟಿ ಮಾಡಿ ಸಿದ್ಧತೆ ಮಾಡಿಕೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ವಿವಿಧ ವೃತ್ತಗಳಲ್ಲಿ ಹಾಗೂ ಎಲ್ಲಾ ಇಲಾಖಾ ಮುಖ್ಯಸ್ಥರು ತಮ್ಮ ಕಚೇರಿಗಳಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಪ್ರತೀಕವಾಗಿ ತಳಿರು ತೋರಣಗಳಿಂದ ಸಿಂಗರಿಸಿ, ವಿದ್ಯುತ್ ದೀಪಾಲಂಕಾರ ಮಾಡಬೇಕು ಮತ್ತು ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ವಾತಂತ್ರ್ಯೋತ್ಸವದಲ್ಲಿ ಕಡ್ಡಾಯವಾಗಿ ಪಾಲ್ಗೋಳ್ಳಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಂ, ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.