ಹೈಲಕಂಡಿ: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಅಸ್ಸಾಂನ ಹೈಲ್ಕಂಡಿ ಜಿಲ್ಲೆಯಲ್ಲಿ ನಡೆದಿದ್ದು, ಅದರಲ್ಲಿ ಒಬ್ಬ ಬಾಲಕಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಇಂದು (ಜುಲೈ 6) ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಬಾರ್ನಿ ಬ್ರೀಸ್ ಟೀ ಎಸ್ಟೇಟ್ ನಿವಾಸಿಗಳಾದ ಇಬ್ಬರು ಬಾಲಕಿಯರು ಶಾಲೆಗೆ ಹೋಗುತ್ತಿದ್ದ ವೇಳೆ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ. ಅವರನ್ನು ಜಿಲ್ಲೆಯ ಮೋಹನ್‌ಪುರ ಪ್ರದೇಶದ ದಟ್ಟ ಅರಣ್ಯಕ್ಕೆ ಕರೆದೊಯ್ದು ಅತ್ಯಾಚಾರ ಎಸಗಲಾಗಿದೆ ಎಂದು ಅಳಗಾಪುರ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿ ಮೃಣಾಲ್ ದಾಸ್ ತಿಳಿಸಿದ್ದಾರೆ.
ಬಾಲಕಿಯರೊಬ್ಬರ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದು, ಇಬ್ಬರು ಬಾಲಕಿಯರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಕಾರ್ಯಚರಣೆ ನಡೆಸಿದ ಪೊಲೀಸರು, ಇಬ್ಬರು ವ್ಯಕ್ತಿಗಳನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ.
ಇಬ್ಬರು ಬಾಲಕಿಯರನ್ನು ಸಿಲ್ಚಾರ್ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅದರಲ್ಲಿ ಒಬ್ಬ ಬಾಲಕಿ ಬುಧವಾರದಂದು ಸಾವನ್ನಪ್ಪಿದ್ದಾಳೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ನಂತರ ದೂರು ದಾಖಲಿಸಿಕೊಂಡು ತನಿಖೆ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.