ಕಾವೇರಿ ತವರಿನಲ್ಲಿ ಭರ್ಜರಿ ಮಳೆ: ನಾಳೆ ಕೊಡಗು ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

ಕೊಡಗು (ಜು.06): ಕಳೆದ ಮೂರ್ನಾಲ್ಕು ದಿನಗಳಿಂದ ಮಲೆನಾಡಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಈಗ ಕರಾವಳಿ ಜಿಲ್ಲೆ ಹಾಗೂ ಕೊಡಗು ಜಿಲ್ಲೆಗಳಲ್ಲಿಯೂ ಭರ್ಜರಿ ಮಳೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಾದ್ಯಂತ ಜು.7ರ ಶುಕ್ರವಾರ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ 07.07,2023 (ಶುಕ್ರವಾರ)ರಂದು ರಜೆಯನ್ನು ಘೋಷಿಸಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.

ತಗ್ಗು ಪ್ರದೇಶಗಳು, ನದಿಗಳಲ್ಲಿ ಸಂಚಾರ ಬೇಡ: ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸರಾಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.  ಪ್ರವಾಸಿಗರು / ಸಾರ್ವಜನಿಕರು ತಗ್ಗು ನೀರಿನ ಪ್ರದೇಶಕ್ಕೆ ಹರಿಯುವ ನದಿಗಳಲ್ಲಿ ಈಜಲು ತೆರಳದಂತೆ ಸೂಚಿಸಲಾಗಿದೆ. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು ಎಂದು ನಿರ್ದೇಶನ ನೀಡಲಾಗಿದೆ. 

ಕರಾವಳಿ ಜಿಲ್ಲೆಗಳಲ್ಲಿ ರಜೆ ಘೋಷಣೆ ಆಗಿತ್ತು:  ಈಗಾಗಲೇ ರಾಜ್ಯದಲ್ಲಿ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ಪ್ರದೇಶದಲ್ಲಿ ವ್ಯಾಪಕ ಮಳೆ ಆಗುತ್ತಿದ್ದ ಹಿನ್ನೆಲೆಯಲ್ಲಿ ಜು.5 ರಂದು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕುಗಳ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮುತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಬಲಿ 4 ರಿಂದ 5 ರವರೆಗೆ ರೆಡ್‌- ಅಲರ್ಚ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕೆಲವು ಸುರಕ್ಷತಾ ಕ್ರಮಗಳನ್ನು ಕೈಗೊಂಡಿತ್ತು