ಬೆಂಗಳೂರು: ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣಗೊಂಡು 2023 ನವೆಂಬರ್ 1ಕ್ಕೆ 50 ವರ್ಷಗಳು ತುಂಬಲಿದೆ. ಅದರಂತೆ, ಭಾರತ ಸ್ವಾತಂತ್ರ್ಯಗೊಂಡು 75 ವರ್ಷ ಪೂರ್ಣಗೊಂಡ ಹಿನ್ನೆಲೆ ಕೇಂದ್ರ ಸರ್ಕಾರ ನಡೆಸಿದ ಸ್ವಾತಂತ್ರ್ಯದ ಅಮೃತಮಹೋತ್ಸವ ಅಭಿಯಾನದ ಮಾದರಿಯಲ್ಲಿಯೇ ಕರ್ನಾಟಕದ ಸುವರ್ಣ ಮಹೋತ್ಸವ (Golden Jubilee of Karnataka) ಆಚರಣೆಗಾಗಿ ಇಡೀ ವರ್ಷ ಕನ್ನಡದ ಕಂಪು ಪಸರಿಸಲು ಹಾಗೂ ಅರಿವು ಮೂಡಿಸಲು ಯೋಜನೆಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಿರುವುದಾಗಿ ಬಜೆಟ್ನಲ್ಲಿ ಘೋಷಿಸಲಾಗಿದೆ.
ಹಾಗಿದ್ದರೆ ಬಜೆಟ್ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಭಿವೃದ್ಧಿಗಾಗಿ ಸರ್ಕಾರ ಕೈಗೊಂಡ ಕ್ರಮಗಳೇನು? ಈ ಕೆಳಗಿನಂತಿವೆ.
- ಮೈಸೂರು ರಾಜ್ಯವು ಕರ್ನಾಟಕ ಎಂದು ಮರುನಾಮಕರಣವಾಗಿ 2023ರ ನವೆಂಬರ್ 1ಕ್ಕೆ 50 ವರ್ಷ ಪೂರ್ಣಗೊಳ್ಳಲಿದೆ. ಈ ಶುಭ ಸಂದರ್ಭದಲ್ಲಿ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಹೆಸರಿನಲ್ಲಿ ಇಡೀ ವರ್ಷ ಕರ್ನಾಟಕದ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ ಮತ್ತು ಯುವಜನತೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಅರಿವು ಮೂಡಿಸುವ ಯೋಜನೆಗಳನ್ನು ಹಮ್ಮಿಕೊಳ್ಳಲು ಕ್ರಮ.
- ಕನ್ನಡ ಸಾಹಿತ್ಯ ಲೋಕಕ್ಕೆ ಸಲ್ಲಿಸಿದ ಅನುಪಮ ಸೇವೆಯನ್ನು ಸ್ಮರಿಸಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ.ಎಂ.ಎಂ.ಕಲಬುರಗಿ ಅವರ ಹೆಸರಿನಲ್ಲಿ ಒಂದು ಟ್ರಸ್ಟ್ ಅನ್ನು ಸ್ಥಾಪಿಸಲು ಕ್ರಮ.
- ಖ್ಯಾತ ಸಾಹಿತಿ ಕೆಪಿ ಪೂರ್ಣಚಂದ್ರ ತೇಜಸ್ವಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಪ್ರತಿಷ್ಠಾನದ ಮೂಲಕ ಅವರ ಸಾಹಿತ್ಯ ಹಾಗೂ ಪರಿಸರ ಸಂರಕ್ಷಣೆಯ ಚಿಂತನೆಗಳನ್ನು ಯುವಜನಾಂಗಕ್ಕೆ ಪರಿಚಯಿಸುವ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಎರಡು ಕೋಟಿ ರೂ.ಗಳನ್ನು ಒದಗಿಸಲು ಕ್ರಮ.
- ರಾಜ್ಯದ ಜಾನಪದ ಕಲೆಗಳನ್ನು ಉಳಿಸಿ ಬೆಳೆಸಲು ಮತ್ತು ಯುವ ಪೀಳಿಗೆಗೆ ಪರಿಚಯಿಸಲು ಪ್ರಮುಖ ಪಾತ್ರವಹಿಸುತ್ತಿರುವ ರಾಮನಗರ ಜಿಲ್ಲೆಯ ಜಾನಪದ ಲೋಕಕ್ಕೆ ಎರಡು ಕೋಟಿ ರೂ. ಅನುದಾನ ನೀಡಲಾಗುವುದು. ಇದೇ ಮಾದರಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕೊಪ್ಪಳ ಜಿಲ್ಲೆಯಲ್ಲಿ ಜಾನಪದ ಲೋಕ ಸ್ಥಾಪನೆ ಮಾಡಲು ಕ್ರಮ.
- ಬಂಜಾರ ಸಮುದಾಯದ ಸಾಂಸ್ಕೃತಿಕ ಮತ್ತು ಜಾನಪದ ನೃತ್ಯ ಕಲೆಗಳು ನಶಿಸಿ ಹೋಗುತ್ತಿರುವ ಕಾರಣ ಅವರ ಸಂಸ್ಕೃತಿಯನ್ನು ಬೆಳೆಸಲು ಹಾಗೂ ಉಳಿಸುವ ನಿಟ್ಟಿನಲ್ಲಿ ವಿನೂತನ ಕಾರ್ಯಕ್ರಮ ಆಯೋಜಿಸಲು ಕ್ರಮ.
- ಕರ್ನಾಟಕದ ಬುಡಕಟ್ಟು ಸಮುದಾಯದ ಜನರ ಕಲಾಪ್ರತಿಭೆಯನ್ನು ಪರಿಚಯಿಸುವ ಹಿತದೃಷ್ಟಿಯಿಂದ ಮತ್ತು ಅವರ ಸಂಸ್ಕೃತಿ, ಜಾನಪದ ವೈದ್ಯ ಪದ್ಧತಿ, ಜಾನಪದ ಕಲೆಗಳ ಪ್ರದರ್ಶನ, ಕರಕುಶಲ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವುದಕ್ಕೆ ಉತ್ತೇಜನ ನೀಡಲು ಬುಡಕಟ್ಟು ಜನಾಂಗದ ಕಲಾವಿದರ ಸಮಾವೇಶ ಆಯೋಜಿಸಲು ಕ್ರಮ.