ಪುತ್ತೂರು: ನಿನ್ನೆ ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಮೃತದೇಹದ ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದೆ. ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದ್ದು, ಸದ್ಯ ಸರಕಾರಿ ಆಸ್ಪತ್ರೆ ಶವಾಗಾರದಿಂದ ಇದೀಗ ಮೆರವಣಿಗೆ ಮೂಲಕ ಮೃತದೇಹವನ್ನ ಹುಟ್ಟೂರಿನತ್ತ ತೆಗೆದುಕೊಂಡು ಹೋಗಲಾಗುತ್ತಿದೆ. ಹಿಂದೂ ಪರ ಸಂಘಟನೆಯ ಸಾವಿರಾರು ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ.
ಪ್ರವೀಣ್ ತಲೆಗೆ ಮೂರು ಬಲವಾದ ತಲವಾರು ಏಟು ಬಿದ್ದಿದೆ ಎನ್ನಲಾಗಿದೆ. ಹಂತಕರು ಪ್ರವೀಣ್ ಬೆನ್ನಿಗೂ ಚೂರಿಯಿಂದ ಒಂದು ಬಾರಿ ಇರಿದಿದ್ದಾರೆ. ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಪೋಸ್ಟ್ ಮಾರ್ಟಂ ಮುಕ್ತಾಯವಾಗಿದ್ದು ಮೆರವಣಿಗೆಯ ಮೂಲಕ ಹುಟ್ಟೂರಿಗೆ ತೆರಳಲಾಗುತ್ತಿದೆ.
ಬೆಳ್ಳಾರೆಯ ಲಕ್ಷ್ಮಿ ವೆಂಕಟರಮಣ ದೇವಸ್ಥಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಾವಿರಾರು ಕಾರ್ಯಕರ್ತರು ಅಂತಿಮ ದರ್ಶನ ಪಡೆಯಲಿದ್ದಾರೆ. ಬೆಳ್ಳಾರೆಯ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ತೆರಳಲಿದೆ.
ಹಂತಕರ ಪತ್ತೆಗೆ ಐದು ವಿಶೇಷ ತಂಡಗಳ ರಚನೆ
ಆರೋಪಿಗಳ ಬೆನ್ನು ಹತ್ತಿ ಕೇರಳ, ಮಡಿಕೇರಿ, ಹಾಸನಕ್ಕೆ ಪೊಲೀಸರ ಮೂರು ತಂಡಗಳು ತೆರಳಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಷ್ ಸೋನಾವಣೆ ಮಾಹಿತಿ ನೀಡಿದ್ದಾರೆ. ಇನ್ನು ಕೊಲೆ ಆರೋಪಿಗಳಿಗಾಗಿ ಕೇರಳ ಗಡಿ ಪ್ರದೇಶ ಹಾಗೂ ಪುತ್ತೂರಿನ ಸುತ್ತಮುತ್ತ ನಾಕಾಬಂದಿ ಹಾಕಿ ವಾಹನಗಳನ್ನು ತಲಾಶ್ ಮಾಡಲಾಗುತ್ತಿದೆ.
ಆರೋಪಿಗಳನ್ನ ಶೀಘ್ರ ಬಂಧಿಸುತ್ತೇವೆ
ಇನ್ನು ಗೃಹಸಚಿವ ಆರಗ ಜ್ಞಾನೇಂದ್ರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಆರೋಪಿಗಳ ಪತ್ತೆಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದ್ದು ಪೊಲೀಸರ ವಿಶೇಷ ತಂಡ ರಚಿಸಲಾಗಿದೆ. ಸುತ್ತಲೂ ನಾಕಾಬಂದಿ ಹಾಕಲಾಗಿದೆ. ಇಂತಹ ಹತ್ಯೆ ತೀವ್ರ ಖಂಡನೀಯ ಆದಷ್ಟು ಬೇಗ ಆರೋಪಿಗಳನ್ನ ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಿಎಂ ಹೇಳಿದ್ದೇನು.?
ಇನ್ನು ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದು ಇಂತಹ ಹೇಯ ಕೃತ್ಯ ಎಸಗಿದ ದುಷ್ಕರ್ಮಿಗಳನ್ನ ಶೀಘ್ರವಾಗಿ ಬಂಧಿಸಿ ಕಾನೂನಿನ ಪ್ರಕಾರ ಶಿಕ್ಷಿಸಲಾಗುವುದು ಎಂದಿದ್ದಾರೆ.
ಪುತ್ತೂರು, ಸುಳ್ಯದಲ್ಲಿ ನಿಷೇಧಾಜ್ಞೆ ಜಾರಿ
ಪ್ರವೀಣ್ ಹತ್ಯೆ ಪ್ರಕರಣದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಪುತ್ತೂರುಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ತಡೆಯಲು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಪುತ್ತೂರು ಉಪವಿಭಾಗದ ವ್ಯಾಪ್ತಿಯಲ್ಲಿ ಸಿಆರ್‌ಪಿಸಿ ಸೆಕ್ಷನ್ ೧೪೪ ಅಡಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ
ಬಂದ್‌ಗೆ ಹಿಂದೂಪರ ಸಂಘಟನೆಗಳ ಕರೆ
ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕು ಬಂದ್‌ಗೆ ಹಿಂದೂ ಪರ ಸಂಘಟನೆಗಳು ಕರೆ ನೀಡಿವೆ. ಸ್ವಯಂ ಪ್ರೇರಿತರಾಗಿ ಬಂದ್ ಮಾಡುವಂತೆ ಹಿಂದೂ ಸಂಘಟನೆಗಳು ಮನವಿ ಮಾಡಿವೆ. ಇನ್ನು ಮುನ್ನೆಚ್ಚರಿಕಾ ಕ್ರಮವಾಗಿ ಪುತ್ತೂರಿನ ಅಂಬಿಕಾ ಕಾಲೇಜ್ ಹಾಗೂ ವಿವೇಕಾನಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.