ಜೋಯಿಡಾ: ಜೋಯಿಡಾ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಸಂದೇಶ್ ದೇಸಾಯಿಯವರು ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಜಿ.ಎಸ್.ಹೆಗಡೆ ಅಜ್ಜೀಬಳ ದತ್ತಿನಿಧಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ವಿವಿಧ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿರುವ ಸಂದೇಶ್ ದೇಸಾಯಿಯವರು ಪ್ರಸಕ್ತ ಉದಯವಾಣಿ ಮತ್ತು ನುಡಿಜೇನು ಪಕ್ರಿಯೆಯಲ್ಲಿ ವರದಿಗಾರರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ತಾಲ್ಲೂಕಿನ ಹಲವಾರು ಸಮಸ್ಯೆಗಳ ಬಗ್ಗೆ ತಮ್ಮ ವರದಿಗಳ ಮೂಲಕ ಬೆಳಕು ಚೆಲ್ಲುವ ಕಾರ್ಯವನ್ನು ಸಂದೇಶ್ ದೇಸಾಯಿಯವರು ಮಾಡಿರುವುದನ್ನು ಇಲ್ಲಿ ಉಲ್ಲೇಖಿಸಬಹುದು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಶಿರಸಿಯಲ್ಲಿರುವ ಕಾರ್ಯಾಲಯದಲ್ಲಿ ಸಂಘದ ಜಿಲ್ಲಾಧ್ಯಕ್ಷರಾದ ಜಿ.ಸುಬ್ರಾಯ ಭಟ್ ಬಕ್ಕಳ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತಿಂಗಳಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಸಂಘದ ವತಿಯಿಂದ ಪ್ರತಿವರ್ಷದಂತೆ ಕೊಡಮಾಡುವ ಜಿ.ಎಸ್.ಹೆಗಡೆ ಅಜ್ಜೀಬಳ ಪ್ರಶಸ್ತಿಗೆ ಸಂದೇಶ್ ದೇಸಾಯಿ ಸೇರಿದಂತೆ ಜಿಲ್ಲೆಯ ಒಟ್ಟು ಐವರು ವರದಿಗಾರರ ಹೆಸರನ್ನು ಅಂತಿಮಗೊಳಿಸಲಾಯ್ತು. ಈ ತಿಂಗಳೊಳಗೆ ಪತ್ರಿಕಾ ದಿನಾಚರಣೆ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ ಎಂದು ಜೋಯಿಡಾ ಕಾರ್ಯನಿರತ ಪತ್ರಕರ್ತರ ಸಂಘವು ಮಾಧ್ಯಮಕ್ಕೆ ನೀಡಿದ ಪ್ರಕಟಣೆಯಲ್ಲಿ ತಿಳಿಸಿದೆ.