ಪುತ್ತೂರು: ಕಳೆದ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯ ಮೇಲಿನಪೇಟೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಮಾಡಲಾಗಿದೆ. ಇದರ ಬೆನ್ನಲ್ಲೇ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ಆಕ್ರೋಶ ಮುಗಿಲು ಮುಟ್ಟಿದೆ.
ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದರು ಸಹ ಹಿಂದೂಗಳ ಹತ್ಯೆಗೈದ ಆರೋಪಿಗಳ ವಿರುದ್ದ ಯಾವುದೇ ಕಠಿಣ ಕ್ರಮವನ್ನು ತೆಗೆದುಕೊಳ್ಳುತ್ತಿಲ್ಲ. ಹಿಂದೂ ಕಾರ್ಯಕರ್ತರ ಹತ್ಯೆ ನಡೆದ ಸಂದರ್ಭದಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳುತ್ತಾರಷ್ಟೇ ನಂತರ ಯಾವುದೇ ಕಠಿಣ ತೀರ್ಮಾನ ತೆಗೆದುಕೊಳ್ಳುವುದಿಲ್ಲ ಎಂಬ ಭಾವನೆ ಕಾರ್ಯಕರ್ತರಲ್ಲಿ ಮೂಡಿದೆ.
ಇದಕ್ಕೆ ಪುಷ್ಟಿ ನೀಡುವಂತೆ ಚಿಕ್ಕಮಗಳೂರು ಬಿಜೆಪಿ ಯುವಮೋರ್ಚಾದ ಮೂವತ್ತಕ್ಕೂ ಅಧಿಕ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಬಿಜೆಪಿ ಯುವ ಮೋರ್ಚಾ ಸದಸ್ಯರಾಗಿದ್ದ ಪ್ರವೀಣ್ ಹತ್ಯೆ ಬೆನ್ನಲ್ಲೇ ಕಾರ್ಯಕರ್ತರು ಆಕ್ರೋಶ ಹೊರಹಾಕಿ ಸಾಮೂಹಿಕ ರಾಜೀನಾಮೆಯ ನಿರ್ಧಾರ ಕೈಗೊಂಡು ಕಾರ್ಯಕರ್ತರಿಗೆ ರಕ್ಷಣೆ ನೀಡದ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.