ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ, ವಾಹನ ಸವಾರ ಸಾವು; ಹೆದ್ದಾರಿ ಪ್ರಾಧಿಕಾರಕ್ಕೆ ಮಂಗಳೂರು ಪೊಲೀಸ್ ನೋಟಿಸ್

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೈಕಂಪಾಡಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ವಾಹನವೊಂದು ಅಪಘಾತಕ್ಕೀಡಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇತ್ತೀಚೆಗೆ ನಡೆದಿದೆ. ರಸ್ತೆ ಗುಂಡಿ ತಪ್ಪಿಸಲು ಪ್ರಯತ್ನಿಸಿದಾಗ ಅಪಘಾತ ಸಂಭವಿಸಿತ್ತು. ಪರಿಣಾಮವಾಗಿ ಕೆಂಜಾರಿನ 69 ವರ್ಷದ ನಿವಾಸಿ ಮೃತಪಟ್ಟಿದ್ದರು. ಈ ವಿಚಾರವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ನೋಟಿಸ್ ನೀಡಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.

ಬಳಕೆದಾರರಿಂದ ಟೋಲ್ ಸಂಗ್ರಹಿಸಿದರೂ ಹೆದ್ದಾರಿಯನ್ನು ಮೋಟಾರು ಚಾಲನೆ ಮಾಡಬಹುದಾದ ಸ್ಥಿತಿಯಲ್ಲಿ ಇಡದಿರುವುದಕ್ಕಾಗಿ ನೆಟಿಜನ್‌ಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಘಟನೆ ಸಂಭವಿಸಿದಾಗಿನಿಂದ, ಎನ್‌ಎಚ್‌ಎಐ ನಿರ್ಲಕ್ಷ್ಯದ ವಿರುದ್ಧ ಕ್ರಮಕೈಗೊಳ್ಳಬೇಕು ಎಂಬ ಬೇಡಿಕೆ ತೀವ್ರಗೊಂಡಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಈ ಹಿಂದೆ ಇಂಥ ಪ್ರಕರಣಗಳಲ್ಲಿ ನೀಡಿರುವ ವಿವಿಧ ಆದೇಶಗಳನ್ನು ಉಲ್ಲೇಖಿಸಿ ನಾಗರಿಕರು ಹೆದ್ದಾರಿ ಪ್ರಾಧಿಕಾರದ ವಿರುದ್ಧ ಕ್ರಮಕ್ಕೆ ಒತ್ತಾಯಿಸುತ್ತಿದ್ದಾರೆ.

ಈ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪೊಲೀಸ್ ಆಯುಕ್ತರು, ಈ ಬಗ್ಗೆ ತನಿಖೆ ನಡೆಸಿ ಪ್ರಾಧಿಕಾರಕ್ಕೆ ನೋಟಿಸ್ ನೀಡಲಾಗುವುದು ಎಂದು ಹೇಳಿರುವುದಾಗಿ ಹಲವು ಮಾಧ್ಯಮಗಳು ವರದಿ ಮಾಡಿವೆ.