ಬಿಜೆಪಿ ಯುವ ಮುಖಂಡನ ಹತ್ಯೆಗೆ ರಾಘವೇಶ್ವರ ಶ್ರೀ ಖಂಡನೆ

ಗೋಕರ್ಣ: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ತೀವ್ರವಾಗಿ ಖಂಡಿಸಿದ್ದಾರೆ. ಯುವ ನಾಯಕನನ್ನು ಮಾರಕಾಸ್ತ್ರಗಳಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿರುವುದು ಎಲ್ಲರೂ ತಲೆ ತಗ್ಗಿಸುವ ವಿಚಾರವಾಗಿದೆ. ತಕ್ಷಣ ಆರೋಪಿಗಳನ್ನು ಬಂಧಿಸಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಅವರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಅದಲ್ಲದೆ ಪ್ರವೀಣ್ ಸದಾ ಶ್ರೀಮಠದ ಜತೆ ಉತ್ತಮ ಸಂಪರ್ಕ ಹೊಂದಿದ್ದು, ಆಗಾಗ್ಗೆ ಶ್ರೀಮಠಕ್ಕೆ ಭೇಟಿ ನೀಡಿ ಸಾಮಾಜಿಕ ವಿಷಯಗಳ ಬಗ್ಗೆ ಮಾರ್ಗದರ್ಶನ ಪಡೆಯುತ್ತಿದ್ದ. ಆತನ ಕುಟುಂಬದ ಜೊತೆ ಶ್ರೀಮಠ ಸದಾ ಇರುತ್ತದೆ ಎಂದು ಅಭಯವನ್ನು ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಜನ ಶಾಂತಿಪ್ರಿಯರು. ಜನ ಆವೇಶಕ್ಕೆ ಒಳಗಾಗದೆ ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಬೇಕು. ನ್ಯಾಯಕ್ಕಾಗಿ ನಡೆಸುವ ಹೋರಾಟ ಶಾಂತಿಯುತವಾಗಿರಲಿ ಎಂದು ಸ್ವಾಮೀಜಿ ಕಿವಿಮಾತು ಹೇಳಿದ್ದಾರೆ.