ಬೀದರ್: ಕರ್ನಾಟಕದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಒಂದಲ್ಲ ಒಂದು ಘಟನೆಗಳು ನಡೆಯುತ್ತಲೇ ಇವೆ. ಚಾಮರಾಜನಗರದ ಯಡವನಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದರು. ಇನ್ನು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಮೆದಗಿನಕೆರೆ ಗ್ರಾಮದ ಬಳಿ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಆಹಾರ ನೀಡುತ್ತಿರುವ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲೇ ಇದೀಗ ಬೀದರ್ ಜಿಲ್ಲೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ.
ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ್ ಕೆ ಗ್ರಾಮದಲ್ಲಿನ ವಸತಿ ಶಾಲೆ ಪ್ರಿನ್ಸಿಪಾಲ್ ನಾಗಶೆಟ್ಟಿ ವಿರುದ್ಧಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಈ ಬಗ್ಗೆ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ. ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಸೇರಿಕೊಂಡು ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪ್ರಾಂಶುಪಾಲ ನಾಗಶೆಟ್ಟಿ ವಿರುದ್ಧ ಮೇಲಾಧಿಕಾರಿಗೆ ದೂರು ನೀಡಿದ್ದಾರೆ. ವಿದ್ಯಾರ್ಥಿನಿಯರ ದೂರಿನ್ವಯ ಚಿಟಗುಪ್ಪಾ ಪೋಲೀಸ್ ಠಾಣೆಯಲ್ಲಿ ಇಂದು(ಜುಲೈ 20) ಪೋಕ್ಸೋ ಅಡಿ ಪ್ರಕರಣ ದಾಖಲಾಗುವ ಸಾಧ್ಯತೆಗಳಿವೆ.