ನಾಳೆಯಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಸಹಿತ ಮಳೆ: ಕರಾವಳಿ ಜನರೇ ಮೀನುಗಾರಿಕೆಗೆ ಹೋಗಬೇಡಿ

ಬೆಂಗಳೂರು (ಜು.23): ರಾಜ್ಯದಲ್ಲಿ ಮುಂಗಾರು ಮಳೆಯ ಪ್ರಭಾವ ಹೆಚ್ಚಾಗಿದ್ದು, ರಾಜ್ಯಾದ್ಯಂತ ಮುಂದಿನ ಎರಡು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ. ಜೊತೆಗೆ, ಕರಾವಳಿ ತೀರ ಪ್ರದೇಶದ ಜಿಲ್ಲೆಗಳಲ್ಲಿ ನಾಳೆಯಿಂದ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬೀಸುವ ಬಿರುಗಾಳಿ ಸಮೇತ ಮಳೆಯಾಗಿವ ಸಾಧ್ಯತೆಯಿದ್ದು, ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. 

ಇಂದಿನಿಂದ ಜು.25ರವರೆಗೆ ರಾಜ್ಯದಾದ್ಯಂತ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಅದರಲ್ಲಿಯೂ ಮುಂದಿನ 24 ಘಂಟೆಗಳಲ್ಲಿ ಕರಾವಳಿಯ ಎಲ್ಲ ಜಿಲ್ಲೆಗಳ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳ ಮತ್ತು ದಕ್ಷಿಣ ಒಳನಾಡಿನ ಹಾಸನ, ಬಳ್ಳಾರಿ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.

ಬಿರುಗಾಳಿ ಸಹಿತ ಮಳೆ, ಸಮುದ್ರಕ್ಕೆ ಹೋಗದಂತೆ ಮೀನುಗಾರರಿಗೆ ಎಚ್ಚರಿಕೆ:  ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ, ರಾಜ್ಯಾದ್ಯಂತ ನಾಳೆ ಒಂದೆರಡು ಕಡೆಗಳಲ್ಲಿ ಬಿರುಗಾಳಿಯು ಘಂಟೆಗೆ 40-50 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. 

ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ:  ಇನ್ನು 25 ನೇ ಜುಲೈ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 21  ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ. ಮುಂದಿನ 48 ಗಂಟೆಗಳು ಕೂಡ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬದಲಾಯ್ತು ಬರದ ಚಿತ್ರಣ: ಉತ್ತರ ಕರ್ನಾಟಕದಲ್ಲಿ ಭರ್ಜರಿ ಮಳೆ: ಬೆಳಗಾವಿ (ಜು.23) :  ಜುಲೈ ತಿಂಗಳ ಮೊದಲಾರ್ಧದ ವರೆಗೆ ಕೈಕೊಟ್ಟಮುಂಗಾರು ಮಳೆಯಿಂದಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಆವರಿಸಿದ್ದ ಬರದ ವಾತಾವರಣ ಕೊಂಚ ಬದಲಾಗಿದೆ. ಕಳೆದೊಂದು ವಾರದಿಂದ ಈ ಭಾಗದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಆಲಮಟ್ಟಿಸೇರಿ ಹಲವು ಜಲಾಶಯಗಳು ಹಾಗೂ ಬ್ಯಾರೇಜ್‌ಗಳ ನೀರಿನ ಒಳಹರಿವು ಶೇ.15ರಿಂದ 20ರಷ್ಟುಹೆಚ್ಚಾಗಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದೆ.

ಈ ಮಧ್ಯೆ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶನಿವಾರವೂ ಮಳೆ ಮುಂದುವರಿದಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಹಾರಾಷ್ಟ್ರದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ, ಭೀಮಾ ಸೇರಿ ಹಲವು ನದಿಗಳ ನೀರಿನ ಮಟ್ಟಏರಿಕೆಯಾಗಿದ್ದು, ಪ್ರವಾಹದ ಆತಂಕ ಶುರುವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಮುಳುಗಡೆಯಾಗಿರುವ 14 ಸೇತುವೆಗಳು ಯಥಾಸ್ಥಿತಿಯಲ್ಲಿದ್ದು, ನದಿ ಸಮೀಪದ ತಗ್ಗುಪ್ರದೇಶಗಳಿಗೆ ನೀರು ನುಗ್ಗಿ ನೂರಾರು ಎಕರೆ ಬೆಳೆ ಹಾನಿಯಾಗಿದೆ. ಬೈಲಹೊಂಗಲದಲ್ಲಿ ಮನೆಯೊಂದರ ಛಾವಣಿ ಕುಸಿದು 13 ಮಂದಿಗೆ ಗಾಯಗಳಾಗಿವೆ.