ಅಭಿವೃದ್ಧಿಗೆ ಅನುದಾನ ನೀಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್ ಹೇಳಿಕೆ ಉಲ್ಲೇಖಿಸಿ ಸರ್ಕಾರಕ್ಕೆ ಚಾಟಿ ಬೀಸಿದ ಪ್ರಲ್ಹಾದ್ ಜೋಶಿ

ಬೆಂಗಳೂರು, (ಜುಲೈ 27): ಈ ವರ್ಷ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ನೀಡಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ಅಧಿಕಾರದ ಹಸಿವಿನಿಂದ ಆಶ್ವಾಸನೆ ಕೊಟ್ಟು ಪೂರೈಸಲೂ ಆಗದೆ ಅಭಿವೃದ್ಧಿಗೆ ಹಣ ಇಲ್ಲ ಎಂದು ಉಪಮುಖ್ಯಮಂತ್ರಿ ಹೇಳಿದ್ದಾರೆ. ರಾಜ್ಯ ಸರ್ಕಾರಕ್ಕೆ ದೂರದೃಷ್ಟಿಯೂ ಇಲ್ಲ, ಜವಾಬ್ದಾರಿಯೂ ಇಲ್ಲ ಎಂದು ರಾಜ್ಯ ಕಾಂಗ್ರೆಸ್​ ಸರ್ಕಾರದ ಆಡಳಿತ ವಿರುದ್ಧ ಚಾಟಿ ಬೀಸಿದ್ದಾರೆ.

ಈ ವರ್ಷ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ನೀಡಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ತಮ್ಮ ಪಕ್ಷದ ಅಸಮಾಧಾನಿತ ಶಾಸಕರನ್ನು ಉದ್ದೇಶಿಸಿ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದ್ದು, ಪಕ್ಷವು ಚುನಾವಣಾ ಪೂರ್ವದಲ್ಲಿ ನೀಡಿದ್ದ ಐದು ಉಚಿತ ‘ಗ್ಯಾರಂಟಿ’ಗಳನ್ನು ಈಡೇರಿಸಲು ಹಣಕಾಸಿನ ಅಡಚಣೆಯಾಗುವುದನ್ನು ಶಾಸಕರು ಅರ್ಥಮಾಡಿಕೊಳ್ಳಬೇಕೆಂಬ ದೃಷ್ಟಿಯಿಂದ ಈ ಮಾತು ಹೇಳಿದ್ದಾರೆ ಎನ್ನಲಾಗಿದೆ.

ಸಚಿವರು ಭೇಟಿಗೆ ಸಿಗುತ್ತಿಲ್ಲ ಎಂಬ ಶಾಸಕರ ದೂರಿನ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದ ಡಿಕೆ ಶಿವಕುಮಾರ್, ಅಭಿವೃದ್ಧಿ ಕಾಮಗಾರಿಗಳು ವಿಳಂಬವಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಲು ಶಾಸಕರು ಶಾಸಕಾಂಗ ಪಕ್ಷದ ಸಭೆಗೆ ಆಗ್ರಹಿಸಿದ್ದಾರೆ ಎಂದು ಹೇಳಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿತ್ತು.