ಹೊನ್ನಾವರ: ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆಗೆ ಆಗ್ರಹಿಸಿ ಇಂದು ಹೊನ್ನಾವರದಲ್ಲಿ ಪ್ರತಿಭಟನೆ ಹಾಗೂ ಉಪವಾಸ ಸತ್ಯಾಗ್ರಹ ಆರಂಭವಾಗಿದೆ. ಪಟ್ಟಣ ಪಂಚಾಯತದ ಆವಾರದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ನಿವೃತ್ತ ನ್ಯಾಯವಾದಿ ಡಿ.ಎಲ್ ಕಾಮತ್ ಹೋರಾಟಕ್ಕೆ ಚಾಲನೆ ನೀಡಿದರು. ಚಂಡೆವಾದನದ ಮೂಲಕ ಪ್ರತಿಭಟನಾ ಮೆರವಣಿಗೆ ಆರಂಭವಾಗಿ, ರಾಷ್ಟ್ರೀಯ ಹೆದ್ದಾರಿ 66ರ ಮೂಲಕ ಸಾಗಿತು. ಮಿನಿವಿಧಾನಸೌಧದ ಎದುರು ಮುಕ್ತಾಯಗೊಳಿಸಿ, ಉಪವಾಸ ಸತ್ಯಾಗ್ರಹ ನಡೆಸಿದರು. ಪ್ರತಿಭಟನಾನಿರತರು ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಹಿರಿಯ ಸಾಹಿತಿ ಎನ್ ಆರ್ ನಾಯ್ಕ, ನ್ಯಾಯವಾದಿ ಆರ್.ಜಿ ನಾಯ್ಕ, ವಿವಿಧ ಸಂಘಟನೆಗಳ ಪ್ರಮುಖರು, ನ್ಯಾಯವಾದಿಗಳು, ವಿವಿಧ ರಾಜಕೀಯ ಪಕ್ಷದ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ನೂರಾರು ಸಂಖ್ಯೆಯಲ್ಲಿ ಸಮಾನ ಮನಸ್ಕ ಸಮೂಹ, ಸಾರ್ವಜನಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.