ಎಸ್.ಎಸ್.ಎಲ್.ಸಿಯಲ್ಲಿ ಕನ್ನಡಕ್ಕೆ ನೂರಕ್ಕೆ ನೂರು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದಾಂಡೇಲಿ : 2022-23ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಕನ್ನಡ ಭಾಷಾ ವಿಷಯದಲ್ಲಿ ಶೇ.100 ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ದಾಡೇಲಿ ನಗರದ ಹಳೆ ನಗರ ಕಟ್ಟಡದಲ್ಲಿರುವ ಸಾಹಿತ್ಯ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತು ಉತ್ತರ ಕನ್ನಡ ಜಿಲ್ಲಾ ಘಟಕ ಹಾಗೂ ದಾಂಡೇಲಿ ತಾಲೂಕು ಘಟಕಗಳ ಸಹಯೋಗದಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದ್ ಮಹಾಲೆಯವರು
ಕನ್ನಡ ಮಾತೃಭಾಷೆಯಾಗಿದ್ದರೂ ನಿಗದಿತ ಕಾಲಮಿತಿಯೊಳಗೆ ಪರೀಕ್ಷೆ ಬರೆದು ನೂರಕ್ಕೆ ನೂರು ಅಂಕಗಳನ್ನು ಪಡೆಯುವುದು ಪರಿಶ್ರಮದ ಸಾಧನೆಯಾಗಿದೆ. ಭಾಷಾ ಪರೀಕ್ಷೆಯಲ್ಲಿ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ಬರೆಯುವುದರ ಜೊತೆಗೆ ವ್ಯಾಕರಣ, ಪದ ಬಳಕೆ, ಅಕ್ಷರ ಇವೆಲ್ಲವುಗಳನ್ನು ಮನದಲ್ಲಿಟ್ಟುಕೊಂಡು ಪರೀಕ್ಷೆ ಬರೆದಾಗ ಮಾತ್ರ ನೂರಕ್ಕೆ ನೂರು ಅಂಕಗಳನ್ನು ಪಡೆಯಲು ಸಾಧ್ಯ. ಕನ್ನಡ ಭಾಷಾ ವಿಷಯದಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಕಸಾಪ ಅಭಿನಂದಿಸುತ್ತಿರುವುದು ನಿಜಕ್ಕೂ ಅಭಿನಂದನೀಯ ಕಾರ್ಯ ಎಂದರು.

ಮುಖ್ಯ ಅತಿಥಿಗಳಾಗಿ ಹಳಿಯಾಳ ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಾಕೀರ ಜಂಗೂಬಾಯಿ, ನಿವೃತ್ತ ಪ್ರಾಚಾರ್ಯರಾದ ಪಿ.ವಿ.ಹೆಗಡೆ, ಕಸಾಪ ಜಿಲ್ಲಾ ಗೌರವ ಕೋಶಾಧ್ಯಕ್ಷರಾದ ಮುರ್ತುಜಾ ಹುಸೇನ್ ಆನೆಹೊಸೂರ್ ಅವರು ಸಂದರ್ಭೋಚಿತವಾಗಿ ಮಾತನಾಡಿದರು.

ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಸಾಪ ಜಿಲ್ಲಾಧ್ಯಕ್ಷರಾದ ಬಿ.ಎನ್.ವಾಸರೆಯವರು ಕನ್ನಡದಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸುವ ನಮ್ಮೆಲ್ಲರ ಆದ್ಯ ಕರ್ತವ್ಯ. ಕನ್ನಡ ನಮ್ಮ ಮಾತೃಭಾಷೆ ಮಾತ್ರವಲ್ಲ ಅದು ಬದುಕಿನ ಭಾಷೆಯೂ ಹೌದು. ಕನ್ನಡವನ್ನು ಬೆಳೆಸುವುದು ಮತ್ತು ಉಳಿಸುವುದು ಪ್ರತಿಯೊಬ್ಬ ಕನ್ನಡಿಗನ ಮುಖ್ಯ ಕರ್ತವ್ಯ ಎಂದರು.

ಈ ಸಂದರ್ಭದಲ್ಲಿ ಪ್ರವಾಸೋದ್ಯಮಿ ಹಾಗೂ ಸಮಾಜ ಸೇವಕರಾದ ಅನಿಲ್ ಪಾಟ್ನೇಕರ್ ಅವರನ್ನು ಹಾಗೂ ಎಸ್.ಎಸ್.ಎಲ್.ಸಿಯಲ್ಲಿ ಕನ್ನಡಕ್ಕೆ ನೂರಕ್ಕೆ ನೂರು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು, ವಿವಿಧ ಶಾಲೆಗಳ ಕನ್ನಡ ಶಿಕ್ಷಕರನ್ನು ಅಭಿನಂದಿಸಲಾಯ್ತು.