ಶಿವಮೊಗ್ಗ: ಮಹಾತ್ಮ ಗಾಂಧಿ ಪ್ರತಿಮೆಯನ್ನು ಕೆಡವಿ ಕಿಡಿಗೇಡಿಗಳು ಧ್ವಂಸ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನಲ್ಲಿ ನಡೆದಿದೆ.ಹೊಳೆಹೊನ್ನೂರಿನ ಸರ್ಕಲ್‌ನಲ್ಲಿ ಸುಮಾರು 18 ವರ್ಷಗಳ ಹಿಂದೆ ಈ ಗಾಂಧಿ ಪ್ರತಿಮೆ ನಿರ್ಮಿಸಲಾಗಿತ್ತು. ಪ್ರತಿಮೆ ಸುತ್ತ ಮಂಟಪ ನಿರ್ಮಿಸಿ, ವಿಶೇಷವಾದ ಗೌರವವನ್ನು ನೀಡಲಾಗುತ್ತಿತ್ತು. ಮಧ್ಯರಾತ್ರಿ ಬೈಕ್‌ನಲ್ಲಿ ಬಂದ ಇಬ್ಬರು ಕಿಡಿಗೇಡಿಗಳು ಗಾಂಧೀಜಿಯವರ ಪ್ರತಿಮೆಯನ್ನು ಕೆಡವಿದ್ದಾರೆ. ಮೂರ್ತಿಯನ್ನು ಧ್ವಂಸಗೊಳಿಸಿದ್ದಷ್ಟೇ ಅಲ್ಲದೆ, ಅದನ್ನು ಬೀಳಿಸಿ ಪುಡಿ ಮಾಡಿದ್ದಾರೆ.ದುಷ್ಕರ್ಮಿಗಳ ಈ ದುಷ್ಕೃತ್ಯ ಸಿಸಿ ಕ್ಯಾಮರಾವೊಂದರಲ್ಲಿ ಸೆರೆಯಾಗಿದೆ ಎನ್ನಲಾಗಿದೆ. ಈ ವಿಚಾರ ತಿಳಿಯುತ್ತಲೇ ಪ್ರತಿಮೆ ಬಳಿಯಲ್ಲಿ ನೂರಾರು ಮಂದಿ ಜಮಾಯಿಸಿ, ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಮೆಯನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಹಾಗು ಹೊಳೆಹೊನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಿಡಿಗೇಡಿಗಳ ಪತ್ತೆಗೆ ಮುಂದಾಗಿದ್ದಾರೆ.ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಘಟನೆಯನ್ನು ಖಂಡಿಸಿದ್ದಾರೆ. ಗಾಂಧಿ ಪ್ರತಿಮೆ ಧ್ವಂಸಗೊಳಿಸಿರುವ ದೇಶ ವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ನೆಲದ ಸ್ವಾತಂತ್ರ‍್ಯ ಚಳುವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗ್ಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ. ಈ ಕೃತ್ಯದ ಹಿಂದೆ ಯಾರೇ ಇರಲಿ, ಅವರನ್ನು ಹಿಡಿದು ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ. ಯಾರೊಬ್ಬರೂ ಈ ಬಗ್ಗೆ ಉದ್ವೇಗಕ್ಕೆ ಒಳಗಾಗಬಾರದು. ಕಾನೂನು ಕೈಗೆತ್ತಿಕೊಳ್ಳದೇ ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಕರಿಸುವಂತೆ ಸಿಎಂ ಮನವಿ ಮಾಡಿದ್ದಾರೆ.