ಬಡತನ ನಿರ್ಮೂಲನೆಗೆ ಗೃಹಲಕ್ಷ್ಮೀ ಯೋಜನೆ ಸಹಕಾರಿ : ಆರ್.ವಿ.ದೇಶಪಾಂಡೆ

ದಾಂಡೇಲಿ : ರಾಜ್ಯ ಸರಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯು ಬಡತನ ನಿರ್ಮೂಲನೆಗೆ ಸಹಕಾರಿಯಾಗಿದೆ. ರಾಜ್ಯದ ಕಾಂಗ್ರೆಸ್ ಸರಕಾರ ಚುನಾವಣೆಯ ಮುನ್ನ ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನಗೊಳಿಸುವ ಮೂಲಕ ನುಡಿದಂತೆ ನಡೆದ ಸರಕಾರ ಎಂಬ ಹೆಗ್ಗಳಿಕೆಯನ್ನು ಹೊಂದಿದೆ. ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಅನುಷ್ಟಾನ ಪಡಿಸಿದ ಗೃಹಲಕ್ಷ್ಮೀ ಯೋಜನೆ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಶಾಸಕರಾದ ಆರ್.ವಿ.ದೇಶಪಾಂಡೆಯವರು ನುಡಿದರು.

ಅವರು ನಗರದ ಸೋಮಾನಿ ವೃತ್ತದ ಹತ್ತಿರದಲ್ಲಿರುವ ಕಾರ್ಮಿಕ ಭವನದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಹಳಿಯಾಳ ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ 20,920, ನಗರ ಪ್ರದೇಶದಲ್ಲಿ 4,660, ದಾಂಡೇಲಿ ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ 3,442, ನಗರ ಪ್ರದೇಶದಲ್ಲಿ 7,866 ಮತ್ತು ಜೋಯಿಡಾ ತಾಲ್ಲೂಕಿನಲ್ಲಿ 12,691 ಮಹಿಳೆಯರು ಸೇರಿದಂತೆ ಕ್ಷೇತ್ರದಲ್ಲಿ ಒಟ್ಟು 49,579 ಮಹಿಳೆಯರು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿ ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಮಹಿಳೆಯರು ಈ ಯೋಜನೆಯ ಲಾಭವನ್ನು ಪಡೆದು ಆರ್ಥಿಕವಾಗಿ ಪ್ರಗತಿ ಸಾಧಿಸಬೇಕೆಂದು ಕರೆ ನೀಡಿದರು. ಈ ಯೋಜನೆಗೆ ವಾರ್ಷಿಕ 32 ರಿಂದ 35 ಸಾವಿರ ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದರು. ಬಡತನ ನಿರ್ಮೂಲನೆಗಾಗಿ ಅನ್ನಭಾಗ್ಯ, ಗೃಹಜ್ಯೋತಿ, ಶಕ್ತಿ, ಗೃಹಲಕ್ಷ್ಮೀ ಮತ್ತು ಯುವ ನಿಧಿ ಯೋಜನೆಗಳಂತಹ ಅಭೂತಪೂರ್ವ ಯೋಜನೆಗಳನ್ನು ಜಾರಿಗೆ ತಂದ ಶ್ರೇಯಸ್ಸು ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಸಲ್ಲಬೇಕೆಂದರು.

ಕಾರ್ಯಕ್ರಮದಲ್ಲಿ ಗೃಹಲಕ್ಷ್ಮೀ ಯೋಜನೆಯ 5 ಫಲಾನುಭವಿಗಳಿಗೆ ಚೆಕ್ ವಿತರಿಸಲಾಯ್ತು. ಕಾರ್ಯಕ್ರಮಕ್ಕೂ ಮುನ್ನ ಸಿದ್ದಿ ನೃತ್ಯ ತಂಡದ ಜೊತೆ ಮೆರವಣಿಗೆಯ ಮೂಲಕ ಆರ್.ವಿ.ದೇಶಪಾಂಡೆಯವರನ್ನು ಕಾರ್ಮಿಕ ಭವನಕ್ಕೆ ಕರೆ ತರಲಾಯ್ತು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಶೈಲೇಶ್ ಪರಮಾನಂದ, ಪೌರಾಯುಕ್ತರಾದ ಆರ್.ಎಸ್.ಪವಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಡಾ.ಲಕ್ಷ್ಮೀದೇವಿ, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿಲ್ ನಾಯ್ಕರ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸಾಯಿ ಗಾಂವಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಆರ್.ಹೆಗಡೆ, ನಗರ ಸಭೆಯ ನಿಕಟಪೂರ್ವ ಅಧ್ಯಕ್ಷರಾದ ಸರಸ್ವತಿ ರಜಪೂತ್, ನಿಕಟಪೂರ್ವ ಉಪಾಧ್ಯಕ್ಷ್ಷ ಸಂಜಯ್ ನಂದ್ಯಾಳ್ಕರ್, ನಗರ ಸಭೆಯ ಸದಸ್ಯರು ಉಪಸ್ಥಿತರಿದ್ದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಡಾ.ಲಕ್ಷ್ಮೀದೇವಿಯವರು ಸ್ವಾಗತಿಸಿದ ಕಾರ್ಯಕ್ರಮಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಕಲ್ಪನಾ ಕೋರ್ವೇಕರ್ ಅವರು ವಂದಿಸಿದರು. ಸಿ.ಆರ್.ಪಿ ಲಲಿತಾ ನಾಯ್ಕ ಮತ್ತು ಶಿಕ್ಷಕಿ ಸೌಮ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.