ಹಳಿಯಾಳ : ಹಳಿಯಾಳ, ದಾಂಡೇಲಿ ಮತ್ತು ಜೋಯಿಡಾ ತಾಲೂಕಿನ ಸ್ವಚ್ಛತೆಯ ಬಗ್ಗೆ ಹಳಿಯಾಳ ಪುರಸಭೆಯ ಸಭಾಂಗಣದಲ್ಲಿ ಸ್ವಚ್ಛತಾ ಆಂದೋಲನ ಕುರಿತು ಶಾಸಕರಾದ ಆರ್.ವಿ.ದೇಶಪಾಂಡೆಯ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು.
ಗಿಡಕ್ಕೆ ನೀರು ಎರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ಆರ್.ವಿ.ದೇಶಪಾಂಡೆ ಅವರು ಹದಿಯಾಳ ಜೋಡ ವಿಧಾನಸಭಾ ಕ್ಷೇತ್ರದಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆಯನ್ನು ನೀಡುವ ನಿಟ್ಟಿನಲ್ಲಿ ಕೆಲಸವಾಗಬೇಕು. ಸ್ವಚ್ಛತೆಯಿದ್ದಲ್ಲಿ ಸಮೃದ್ಧ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ಸೆಪ್ಟಂಬರ್ 25 ರಿಂದ ಅಕ್ಟೋಬರ್ 02 ರವರೆಗೆ ಹಳಿಯಾಳ, ದಾಂಡೇಲಿ ಮತ್ತು ಜೋಯಿಡಾ ತಾಲೂಕಿನ ವ್ಯಾಪ್ತಿಯಲ್ಲಿ ಸ್ವಚ್ಛತಾ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಕರೆ ನೀಡಿದರು.
ಅಧಿಕಾರಿಗಳು ಸ್ವಚ್ಛತೆಯ ವಿಚಾರದಲ್ಲಿ ಹೆಚ್ಚಿನ ನಿಗಾ ವಹಿಸಿ ಕಾರ್ಯ ನಿರ್ವಹಿಸಬೇಕು. ಸ್ವಚ್ಛ ಸಮಾಜ ನಿರ್ಮಾಣವಾಗುವ ನಿಟ್ಟಿನಲ್ಲಿ ಇಲಾಖೆಗಳ ಜೊತೆ ಸಾರ್ವಜನಿಕರು ಕೂಡ ಕೈಜೋಡಿಸಬೇಕೆಂದು ಕರೆ ನೀಡಿದರು. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಉದ್ಯಾನವನಗಳು ರಸ್ತೆಗಳು, ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕ ರಸ್ತೆಗಳನ್ನು ಸ್ವಚ್ಛತಾ ಅಭಿಯಾನದಡಿ ಸ್ವಚ್ಛವಾಗಿಸಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.
ಸಭೆಯಲ್ಲಿ ಹಳಿಯಾಳದ ತಹಶೀಲ್ದಾರ್ ಜಿ.ಕೆ ರತ್ನಾಕರ, ದಾಂಡೇಲಿಯ ತಹಶೀಲ್ದಾರ್ ಶೈಲೇಶ್ ಪರಮಾನಂದ, ಡಿವೈಎಸ್ಪಿ ಶಿವಾನಂದ ಕಟಗಿ, ಹಳಿಯಾಳ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಪರಶುರಾಮ ಘಸ್ತೆ, ದಾಂಡೇಲಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ ಹಾಲಮನ್ನವರ್, ನಗರ ಸಭೆಯ ಪೌರಾಯುಕ್ತರಾದ ಆರ್.ಎಸ್.ಪವಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಹಳಿಯಾಳ ಪುರಸಭೆ ಮತ್ತು ದಾಂಡೇಲಿ ನಗರಸಭೆಯ ಸದಸ್ಯರು ಉಪಸ್ಥಿತರಿದ್ದರು.
ಶಿಕ್ಷಕಿ ಭಾರತಿ ನಲವಡೆ ಕಾರ್ಯಕ್ರಮವನ್ನು ನಿರೂಪಿಸಿದರು.