ಅವೇಡಾದಲ್ಲಿ ವಿಜೃಂಭಣೆಯಿಂದ ನಡೆದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮ

ಜೋಯಿಡಾ : ತಾಲ್ಲೂಕಿನ ಅವೇಡಾದಲ್ಲಿ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಇಂದು ಭಾನುವಾರ ಹಮ್ಮಿಕೊಳ್ಳಲಾಗಿತ್ತು.

ಕಳೆದ ಹಲವಾರು ವರ್ಷಗಳಿಂದ ಶ್ರೀ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ ಇಡೀ ಗ್ರಾಮದ ಜನರು ಒಂದಾಗಿ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಹಾಗೂ ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅಂತೇಯೇ ಇಂದು ಕೂಡ ಶ್ರೀ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದ ನಿಮಿತ್ತ ಪ್ರತಿಷ್ಠಾಪಿಸಲಾದ ಶ್ರೀ ಗಣೇಶನಿಗೆ ವಿಶೇಷ ಪೂಜೆ ಹಾಗೂ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಸಮಾಜ ಸೇವಕರು ಹಾಗೂ ಪ್ರವಾಸೋದ್ಯಮಗಳು ಆಗಿರುವ ವಿಜಲಿವುಡ್ ರೆಸಾರ್ಟಿನ ಮಾಲಕರಾದ ವಿನಾಯಕ್ ಜಾಧವ್ ಅವರು ಸಾರ್ವಜನಿಕ ಅನ್ನಸಂತರ್ಪಣೆಯ ಸೇವಾಕತೃಗಳಾಗಿ ಶ್ರೀ ಸ್ವಾಮಿಗೆ ಭಕ್ತಿ ಸೇವೆಯನ್ನು ಸಲ್ಲಿಸಿದರು.

ಇಂದು ನಡೆದ ಪೂಜಾ ಕಾರ್ಯಕ್ರಮದಲ್ಲಿ ಅವೇಡಾ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಊರ ಗಣ್ಯರು, ಮುಖಂಡರು, ಗ್ರಾಮಸ್ಥರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಜಾತಿ, ಮತ, ಭೇದ ಮರೆತು ಎಲ್ಲರೂ ಒಂದಾಗಿ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಿಕೊಂಡು ಬರುತ್ತಿರುವುದು ವಿಶೇಷವಾಗಿದೆ.