ಹಳಿಯಾಳ : ತಾಲ್ಲೂಕಿನ ಯಡೋಗಾ ಗ್ರಾಮದ ಸರಕಾರಿ ಪ್ರೌಢ ಶಾಲೆಗೆ 2022-23ನೇ ಸಾಲಿನ ವಿವೇಕ ಯೋಜನೆಯಡಿ ಮಂಜೂರಾಗಿ ನಿರ್ಮಾಣಗೊಂಡ ನೂತನ ಶಾಲಾ ಕೊಠಡಿಯನ್ನು ಇಂದು ಬುಧವಾರ ಶಾಸಕರಾದ ಆರ್ ವಿ ದೇಶಪಾಂಡೆ ಅವರು ಉದ್ಘಾಟಿಸಿದರು.
ನೂತನ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದ ಆರ್ ವಿ ದೇಶಪಾಂಡೆ ಅವರು ನಾನು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತನ್ನು ನೀಡುವ ಮೂಲಕ ಕ್ಷೇತ್ರದ ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರದ ಪ್ರಗತಿಗೆ ಶಕ್ತಿಮೀರಿ ಶ್ರಮಿಸುತ್ತಿದ್ದೇನೆ. ರಾಷ್ಟ್ರದ ಪ್ರಗತಿಯಲ್ಲಿ ಶೈಕ್ಷಣಿಕ ಕ್ಷೇತ್ರ ಮತ್ತು ಆರೋಗ್ಯ ಕ್ಷೇತ್ರದ ಕೊಡುಗೆ ಅಪಾರವಾಗಿದೆ. ಪ್ರತಿಯೊಬ್ಬರೂ ಶೈಕ್ಷಣಿಕವಾಗಿ ಪ್ರಗತಿಯೆಡೆಗೆ ಸಾಗಿದಾಗ ರಾಷ್ಟ್ರ ಅಭಿವೃದ್ಧಿಯನ್ನು ಕಾಣಲು ಸಾಧ್ಯ. ಅದೇ ರೀತಿ ಆರೋಗ್ಯದ ಕಡೆಗೂ ಹೆಚ್ಚಿನ ಆದ್ಯತೆಯನ್ನು ನೀಡಬೇಕು. ಕ್ಷೇತ್ರದಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಅವಶ್ಯ ಬೇಕಾದ ಮೂಲಸೌಕರ್ಯಗಳನ್ನು ಒದಗಿಸಿ ಕೊಡುವ ನಿಟ್ಟಿನಲ್ಲಿ ತ್ವರಿತಗತಿಯಲ್ಲಿ ಪ್ರಯತ್ನಿಸಲಾಗುತ್ತಿದೆ ಎಂದರು. ರೂ.16.40 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಈ ಕೊಠಡಿಯು ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಪ್ರೇರಣೆಯಾಗಲಿ ಎಂದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು,ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಶಾಲಾ ಸಿಬ್ಬಂದಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.