ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ನೂತನವಾಗಿ ಮಂಜೂರಾದ ಶಾಲಾ ಕೊಠಡಿಗೆ ಅಡಿಗಲ್ಲು ಸಮಾರಂಭ

ಜೋಯಿಡಾ : ಜೋಯಿಡಾ ತಾಲ್ಲೂಕು ಕೇಂದ್ರದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ನೂತನವಾಗಿ ಮಂಜೂರಾದ ಶಾಲಾ ಕೊಠಡಿಯ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಶಾಸಕರಾದ ಆರ್.ವಿ.ದೇಶಪಾಂಡೆಯವರು ಇಂದು ಗುರುವಾರ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಆರ್ ವಿ ದೇಶಪಾಂಡೆ ಅವರು ಶೈಕ್ಷಣಿಕ ಕ್ಷೇತ್ರದ ಪ್ರಗತಿಯಾದಂತೆ ರಾಷ್ಟ್ರದ ಸಮಗ್ರ ಅಭಿವೃದ್ಧಿ ಸಾಧ್ಯ. ಈ ರಾಷ್ಟ್ರದ ಅಭಿವೃದ್ಧಿ ಶೈಕ್ಷಣಿಕ ಕ್ಷೇತ್ರದ ಮೇಲೆ ನಿಂತಿದೆ. ಈ ನಿಟ್ಟಿನಲ್ಲಿ ತಾಲೂಕಿನ ಶಿಕ್ಷಣ ಕ್ಷೇತ್ರದ ಪ್ರಗತಿಗೆ ವಿಶೇಷ ಮುತುವರ್ಜಿಯನ್ನು ವಹಿಸಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ತಾಲೂಕಿನಲ್ಲಿ ಬಹುತೇಕ ಶಾಲೆಗಳ ಅಭಿವೃದ್ಧಿ ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ನಡೆದಿದೆ. ಕಳಪೆ ಗುಣಮಟ್ಟದ ಕಾಮಗಾರಿಗಳನ್ನು ನಡೆಸಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಅಧಿಕಾರಿಗಳು ಅಗತ್ಯ ಕ್ರಮವನ್ನು ಕೈಗೊಳ್ಳಬೇಕು. ಕಾಮಗಾರಿಗಳ ಗುಣಮಟ್ಟಕ್ಕೆ ಅಧಿಕಾರಿಗಳು ಉತ್ಸಾಹದಿಂದ ಕೆಲಸ ನಿರ್ವಹಿಸಬೇಕು. ಗುತ್ತಿಗೆದಾರರ ಜೊತೆ ಶಾಮೀಲಾಗಿ ಕಳಪೆ ಗುಣಮಟ್ಟದ ಕಾಮಗಾರಿಗಳನ್ನು ನಡೆಸಲು ಅಧಿಕಾರಿಗಳು ಸಹಕಾರ ನೀಡುವುದು ಉತ್ತಮವಾದ ಬೆಳವಣಿಗೆಯಲ್ಲ. ತಾಲೂಕಿನಲ್ಲಿ ಬಹುತೇಕ ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿರುವುದು ನನ್ನ ಗಮನಕ್ಕೆ ಬಂದಿದೆ. ಇದಕ್ಕೆ ಮೂಲ ಕಾರಣ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೇ ಆಗಿರುತ್ತಾರೆ. ತಾಲೂಕಿನಲ್ಲಿ ನಡೆದ ಮತ್ತು ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ ಸೂಕ್ತ ರೀತಿಯಲ್ಲಿ ಪರಿಶೀಲನೆಯನ್ನು ನಡೆಸಲಾಗುವುದು. ಕಾಮಗಾರಿಗಳ ಗುಣಮಟ್ಟದಲ್ಲಿ ಲೋಪಗಳು ಕಂಡ ಬಂದಲ್ಲಿ ಗುತ್ತಿಗೆದಾರರ ಜೊತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಮೇಲೆ ಸೂಕ್ತ ಕ್ರಮವನ್ನು ಕೈಗೊಳ್ಳಲಾಗುವುದು. ಸರಕಾರದ ಕೆಲಸ ದೇವರ ಕೆಲಸ. ಕೈ ತುಂಬ ಸಂಬಳ ಸಿಗುವ ಸಂದರ್ಭದಲ್ಲಿ ಗುತ್ತಿಗೆದಾರರ ಎಂಜಲು ಕಾಸಿಗೆ ಕೈ ಚಾಚಾದಿರಿ ಎಂದು ಅಧಿಕಾರಿಗಳಿಗೆ ಎಚ್ಚರಿಕೆಯ ಮಾತುಗಳನ್ನು ಹೇಳಿದರು. ತಾಲೂಕಿನಲ್ಲಿ ಕಾಮಗಾರಿಗಳು ಕಳಪೆ ಗುಣಮಟ್ಟದಲ್ಲಿ ಆಗಿದ್ದಿದ್ದರೆ ಅದಕ್ಕೆ ಕಾರಣ ಅಧಿಕಾರಿಗಳೇ ಆಗಿರುತ್ತಾರೆ ಎಂದು ಹೇಳಿದರು. ಇನ್ನಾದರೂ ಅಧಿಕಾರಿಗಳು ಮೈಚಳಿ ಬಿಟ್ಟು ಸರಕಾರದ ಕೆಲಸ ದೇವರ ಕೆಲಸ ಎಂದು ಅರಿತು ಪಾರದರ್ಶಕವಾಗಿ ಹಾಗೂ ಪ್ರಾಮಾಣಿಕವಾಗಿ ಸೇವೆಯನ್ನು ಸಲ್ಲಿಸಲು ಮುಂದಾಗಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಶೈಲೇಶ್ ಪರಮಾನಂದ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಮಹಮ್ಮದ್ ಇಜಾನ್ ಸಬೂರ್, ಕ್ಷೇತ್ರ ಶಿಕ್ಷಣಾಧಿಕಾರಿ ಬಸೀರ್ ಶೇಖ್, ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು, ಗಣ್ಯರು ಉಪಸ್ಥಿತರಿದ್ದರು