ಕಾವೇರಿ ನದಿ ನೀರು ಹಂಚಿಕೆ: ತಮಿಳುನಾಡಿಗೆ ಭೇಟಿ ನೀಡಿ ವರದಿ ಸಲ್ಲಿಸಲು ರಾಜ್ಯಕ್ಕೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ

ನವದೆಹಲಿ, ಅಕ್ಟೋಬರ್ 25: ಕಾವೇರಿ ನದಿ ನೀರು ಹಂಚಿಕೆ  ವಿಚಾರವಾಗಿ ತಮಿಳುನಾಡಿಗೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಕರ್ನಾಟಕ ಸಂಪುಟ ಸಮಿತಿಗೆ  Congress High Command  ಬುಧವಾರ ಸೂಚನೆ ನೀಡಿದೆ. ಆದಷ್ಟು ಬೇಗ ವರದಿ ನೀಡುವಂತೆ ಸೂಚನೆ ತಿಳಿಸಲಾಗಿದೆ. ಈ ಮಧ್ಯೆ, ಕಂದಾಯ ಸಚಿವ ಕೃಷ್ಣಭೈರೇಗೌಡ ನೇತೃತ್ವದ ರಾಜ್ಯ ಸಂಪುಟ ಸಮಿತಿ ಬುಧವಾರ ಕೇಂದ್ರ ಕೃಷಿ, ಗೃಹ ಕಾರ್ಯದರ್ಶಿ ಭೇಟಿಯಾಗಿ ಮಾತುಕತೆ ನಡೆಸಿದೆ. ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಲಾಗಿದೆ.

ಈ ವರ್ಷ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಎದುರಾಗಿರುವುದರಿಂದ ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೆ ಹೆಚ್ಚಾಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ನೀರು ಬಿಡುವ ಕುರಿತು ನೀಡಿರುವ ಆದೇಶಗಳಿಗೆ ಕರ್ನಾಟಕದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ರಾಜ್ಯದಾದ್ಯಂತ ಪ್ರತಿಭಟನೆಗಳೂ ನಡೆಯುತ್ತಿವೆ. ಈ ವಿಚಾರವಾಗಿ ಕರ್ನಾಟಕ ಸುಪ್ರೀಂ ಕೋರ್ಟ್​​ಗೂ ಮೊರೆ ಹೋಗಿತ್ತು.

ಈ ಎಲ್ಲದರ ಮಧ್ಯೆ ಕಾವೇರಿ ವಿವಾರ ರಾಜಕೀಯ ಸ್ವರೂಪ ಪಡೆದುಕೊಂಡಿತ್ತು. ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದವು. ಇಂಡಿಯಾ ಮೈತ್ರಿಕೂಟದಲ್ಲಿರುವ ತಮಿಳುನಾಡಿನ ಆಡಳಿತಾರೂಢ ಡಿಎಂಕೆಯನ್ನು ಮೆಚ್ಚಿಸುವುದಕ್ಕಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ನೀರು ಬಿಡುತ್ತಿದೆ. ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಡಲಾಗುತ್ತಿದೆ ಎಂದು ಬಿಜೆಪಿ ಹಾಗೂ ಜೆಡಿಎಸ್ ಟೀಕಿಸಿದ್ದವು.

ಈ ಎಲ್ಲ ಬೆಳವಣಿಗೆಗಳ ನಂತರ ಕಾವೇರಿ ನೀರು ನಿರ್ವಹಣಾ ಸಮಿತಿಯು ಕರ್ನಾಟಕಕ್ಕೆ ತುಸು ರಿಲೀಫ್ ನೀಡುವಂತ ನಿರ್ದೇಶನ ನೀಡಿತ್ತು. ಆದಾಗ್ಯೂ, ಕಾವೇರಿ ಜಲಾನಯನ ಪ್ರದೇಶಗಳಾದ ಮಂಡ್ಯ, ಮೈಸೂರು ಮತ್ತಿತರ ಪ್ರದೇಶಗಳಲ್ಲಿ ರೈತರು ಹಾಗೂ ಹೋರಾಟಗಾರರಿಂದ ಪ್ರತಿಭಟನೆಗಳು ನಡೆಯುತ್ತಿವೆ.