ಬೆಂಗಳೂರು, (ಡಿಸೆಂಬರ್ 10): ಬಿಬಿಎಂಪಿ ವ್ಯಾಪ್ತಿಯ ಸರ್ಕಾರಿ ಗುತ್ತಿಗೆಗಳಲ್ಲಿ ಶೇ 40ರಷ್ಟು ಕಮಿಷನ್ ಪಡೆದಿರುವ ಆರೋಪದ ಕುರಿತು ತನಿಖೆ ನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌ಎನ್ ನಾಗಮೋಹನ್ ದಾಸ್ ನೇತೃತ್ವದ ಏಕವ್ಯಕ್ತಿ ತನಿಖಾ ಸಮಿತಿ ರಚಿಸಿದ್ದ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದರೆ 2019-20ರಿಂದ 2022-23ರ ನಡುವೆ ನಗರಾಭಿವೃದ್ಧಿ, ಜಲಸಂಪನ್ಮೂಲ, ಸಣ್ಣ ನೀರಾವರಿ ಮತ್ತು ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಇಲಾಖೆಗಳಲ್ಲಿ ಹಂಚಿಕೆಯಾಗಿರುವ ಕಾಮಗಾರಿಗಳಲ್ಲಿ ಶೇ 40ರಷ್ಟು ಕಮಿಷನ್ ಪಡೆದಿರುವ ಆರೋಪದ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರವು ಆ.5 2023ರಂದು ಆದೇಶವನ್ನು ಹೊರಡಿಸಿತ್ತು.
ಸರ್ಕಾರದ ಈ ಆದೇಶದ ವಿರುದ್ಧ ಹಲವು ಗುತ್ತಿಗೆದಾರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು, ಸರ್ಕಾರದ ಆದೇಶಕ್ಕೆ ತಡೆ ನೀಡಿದೆ. ಸರ್ಕಾರದ ಆದೇಶ ಪ್ರಶ್ನಿಸಿ ನಿಕ್ಷೇಪ ಇನ್ಸಾ ಪ್ರಾಜೆಕ್ಟ್ ಸೇರಿ 17 ಗುತ್ತಿಗೆ ಕಂಪನಿ, 28 ಜನ ಗುತ್ತಿಗೆದಾರರು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನ್ಯಾಯಪೀಠ, ಸರ್ಕಾರದ ಆದೇಶಕ್ಕೆ ತಡೆ ನೀಡಿ ಆದೇಶ ಹೊರಡಿಸಿದೆ.
ಸಮಿತಿ ರಚನೆ ಮಾಡಿ ಆದೇಶ ಹೊರಡಿಸಿರುವ ತನ್ನ ಕ್ರಮದ ಕುರಿತು ರಾಜ್ಯ ಸರ್ಕಾರ ಸಮರ್ಥನೆ ನೀಡಬೇಕಿದೆ. ಅದಕ್ಕಾಗಿ ತನಿಖಾ ಸಮಿತಿ ಮತ್ತು ಏಕ ವ್ಯಕ್ತಿ ತನಿಖಾ ಆಯೋಗ ರಚನೆ ಮಾಡಿರುವ ಸರ್ಕಾರದ ಆದೇಶ, ಸಂಬಂಧಿಸಿದ ಮುಂದಿನ ಎಲ್ಲಾ ಪ್ರಕ್ರಿಯೆಗಳಿಗೆ ತಡೆ ನೀಡಲಾಗಿದೆ ಎಂದು ಆದೇಶದಲ್ಲಿ ಹೈಕೋರ್ಟ್ ತಿಳಿಸಿದೆ.
ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆಗೆ ನೋಟಿಸ್ ಸ್ವೀಕರಿಸಲು ಹೆಚ್ಚುವರಿ ಸರ್ಕಾರಿ ವಕೀಲರಿಗೆ ಕೋರ್ಟ್ ಸೂಚಿಸಿದೆ. ಗುತ್ತಿಗೆದಾರರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ಎರಡನೇ ಪ್ರತಿವಾದಿಯನ್ನಾಗಿ ಮಾಡಿದ್ದಾರೆ.