ನವದೆಹಲಿ, ಡಿ.15: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಆದರೆ, ಸೀಟು ಹಂಚಿಕೆ ಕುರಿತ ಮಾತುಕತೆಯೊಂದು ನಡೆಯಲು ಬಾಕಿ ಇರುವಾಗಲೇ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಸಂಸತ್ ಭವನದಲ್ಲಿ ಪ್ರಸ್ತುರ ರಾಜಕೀಯ ಬೆಳವಣಿಗೆಗಳ ಕುರಿತು ದೇವೇಗೌಡ ಮತ್ತು ಖರ್ಗೆ ಅವರು ಮಾತುಕತೆ ನಡೆಸಿದರು. ಈ ಬಗ್ಗೆ ಟ್ವೀಟ್ ಮಾಡಿದ ರಾಜ್ಯಸಭಾ ಸದಸ್ಯ ರಾಜೀವ್ ಶುಕ್ಲಾ, “ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರನ್ನು ಸಂಸತ್ತಿನ ಭವನದಲ್ಲಿ ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದರು” ಎಂದರು.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲುಂಡ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಲೋಕಸಭೆ ಚುನಾವಣೆಯಲ್ಲಿ ಎಲ್ಲಾ 28 ಸ್ಥಾನಗಳನ್ನು ಗೆದ್ದುಕೊಳ್ಳಲು ಮೈತ್ರಿ ಮಾಡಿಕೊಂಡಿವೆ. ಆ ಮೂಲಕ ಸೋಲಿನ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ. ಮೈತ್ರಿ ಬಗ್ಗೆ ಉಬಯ ಪಕ್ಷಗಳ ನಾಯಕರು ಘೋಷಣೆ ಮಾಡಿದ್ದು, ಸೀಟು ಹಂಚಿಕೆ ಮಾತುಕತೆ ನಡೆಯುತ್ತಿದೆ.
ಮೈತ್ರಿ ಮಾಡಿಕೊಂಡರೆ ಮುಂದಾಗುವ ಸಾಧಕ ಮತ್ತು ಬಾಧಕಗಳ ಬಗ್ಗೆ ಬಿಜೆಪಿ ನಾಯಕರು ಚರ್ಚೆ ನಡೆಸಿಯೇ ಕೊನೆಗೆ ದಳಪತಿಗಳ ಜತೆ ಮೈತ್ರಿಗೆ ಒಲವು ತೋರಿದ್ದಾರೆ. 2019ರ ಚುನಾವಣೆಯಲ್ಲಿ ಬಿಜೆಪಿ ಕರ್ನಾಟಕದಲ್ಲಿ 28 ಕ್ಷೇತ್ರಗಳ ಪೈಕಿ 25ರಲ್ಲಿ ಗೆದ್ದು ಬೀಗಿತ್ತು. ಆದರೆ, 2024 ರ ಚುನಾವಣೆಯಲ್ಲಿ ಅಷ್ಟು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಕಡಿಮೆ ಇರುವ ಹಿನ್ನೆಲೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದೆ. ಈ ನಡುವೆ ದಳಪತಿ ದೇವೇಗೌಡರು ಕಾಂಗ್ರೆಸ್ ಅಧ್ಯಕ್ಷರನ್ನು ಭೇಟಿಯಾಗಿರುವುದು ಬಿಜೆಪಿ ನಾಯಕರ ನಿದ್ದೆಗೆಡಿಸಿದಂತಾಗಿದೆ.