ಬರ್ಮಿಂಗ್‌ಹ್ಯಾಮ್: ಕಾಮನ್ ವೆಲ್ತ್ ಗೇಮ್ಸ್ ಕ್ರೀಡಾಕೂಟದ ಮಹಿಳಾ ಕ್ರಿಕೆಟ್ ನಲ್ಲಿ ಭಾರತ ವನಿತೆಯರು ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವನಿತೆಯರನ್ನು ಸೋಲಿಸುವುದರ ಮೂಲಕ ಫೈನಲ್ ಪಂದ್ಯಕ್ಕೆ ಲಗ್ಗೆ ಇಟ್ಟಿದ್ದಾರೆ.
ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ವನಿತೆಯರು 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 164 ರನ್ ಕಲೆ ಹಾಕುವುದರ ಮೂಲಕ ಬಲಿಷ್ಠ ಇಂಗ್ಲೆಂಡ್ ವನಿತೆಯರಿಗೆ 165 ರನ್‌ಗಳ ಪೈಪೋಟಿಯುತ ಗುರಿಯನ್ನು ನೀಡಿತ್ತು.
ಅತ್ತ ಟೀಂ ಇಂಡಿಯಾ ನೀಡಿದ ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ಇಂಗ್ಲೆಂಡ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 160 ರನ್ ಕಲೆಹಾಕಿತು. ಈ ಮೂಲಕ ಭಾರತ 4 ರನ್‌ಗಳ ರೋಚಕ ಜಯ ಸಾಧಿಸಿದ್ದು ಕಾಮನ್ ವೆಲ್ತ್ ಗೇಮ್ಸ್ ಕ್ರೀಡಾಕೂಟದ ಚೊಚ್ಚಲ ಕ್ರಿಕೆಟ್ ಆವೃತ್ತಿಯಲ್ಲಿಯೇ ಫೈನಲ್ ಪಂದ್ಯಕ್ಕೆ ಲಗ್ಗೆಯಿಟ್ಟಿದೆ.