ಹುಬ್ಬಳ್ಳಿ, ಜನವರಿ 01: 31 ವರ್ಷದ ಬಳಿಕ ರಾಮಜನ್ಮಭೂಮಿ ಹೋರಾಟದ ಪ್ರಕರಣ (Ramjanmabhoomi case) ಕ್ಕೆ ಮರುಜೀವ ಬಂದಿದೆ. ಆ ಮೂಲಕ ರಾಮಜನ್ಮಭೂಮಿ ಹೋರಾಟಗಾರರಿಗೆ ಬಂಧನದ ಭೀತಿ ಶುರುವಾಗಿದೆ. ಮೂರು ದಶಕಗಳ ಹಿಂದೆ ರಾಮಜನ್ಮಭೂಮಿ ಹೋರಾಟದಲ್ಲಿ ಹಿಂದೂ ಕಾರ್ಯಕರ್ತರು ಭಾಗಿಯಾಗಿದ್ದರು. ಹುಬ್ಬಳ್ಳಿ ಪೊಲೀಸರಿಂದ ಅಂದಿನ ಆರೋಪಿಗಳಿಗಾಗಿ ಏಕಾಏಕಿ ಹುಡುಕಾಟ ಆರಂಭಿಸಿದ್ದಾರೆ.
31 ವರ್ಷದ ಬಳಿಕ ಓರ್ವ ಆರೋಪಿಯನ್ನ ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆ ಮಾಡಲಾಗಿದೆ. ಪ್ರಕರಣದ 3ನೇ ಆರೋಪಿ ಶ್ರೀಕಾಂತ್ ಪೂಜಾರಿಯನ್ನು ಕಳೆದ ಶುಕ್ರವಾರ ಬಂಧಿಸಿ, ನ್ಯಾಯಾಂಗ ವಶಕ್ಕೆ ನೀಡಲಾಗಿದೆ.
ಪ್ರಕರಣ ದಾಖಲಾದಾಗ ಆರೋಪಿತ ವ್ಯಕ್ತಿಗಳು 30ರಿಂದ 35 ವರ್ಷದ ಒಳಗಿನ ಯುವಕರಾಗಿದ್ದರು. ಈಗ ಅವರಿಗೆಲ್ಲ 65-70 ವರ್ಷಗಳಾಗಿವೆ. ರಾಜು ಧರ್ಮದಾಸ್, ಶ್ರೀಕಾಂತ್ ಪೂಜಾರಿ, ಅಶೋಕ್ ಕಲಬುರಗಿ, ಷಣ್ಮುಖ ಕಾಟಗಾರ, ಗುರುನಾಥಸಾ ಕಾಟಿಗಾರ, ರಾಮಚಂದ್ರಸಾ ಕಲಬುರಗಿ ಹಾಗೂ ಅಮೃತ ಕಲಬುರಗಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಕರಸೇವೆಗೂ ಮುನ್ನ ಅಂದರೆ ಡಿಸೆಂಬರ್ 5, 1992 ರಂದು ಹುಬ್ಬಳ್ಳಿ ನಗರದಲ್ಲಿ ಗಲಭೆ ಸಂಭವಿಸಿದ್ದು, ಒಂದು ಮಳಿಗೆಗೆ ಬೆಂಕಿ ಹಚ್ಚಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಜನರ ವಿರುದ್ಧ ಹುಬ್ಬಳ್ಳಿಯ ಶಹರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಸದ್ಯ ಈ ಹಳೆ ಪ್ರಕರಣಕ್ಕೆ ಮರುಜೀವ ಕೊಡಲು ಹುಬ್ಬಳ್ಳಿ ಪೊಲೀಸರು ಮುಂದಾಗಿದ್ದಾರೆ.