ಹೊನ್ನಾವರ: ತಾಲೂಕಿನ ಅಪ್ಸರಕೊಂಡದಲ್ಲಿ ಸಂಭವನೀಯ ಗುಡ್ಡಕುಸಿತ ಸ್ಥಳಕ್ಕೆ ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ್ ನಾಯ್ಕ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ತಹಶೀಲ್ದಾರ ನಾಗರಾಜ ನಾಯ್ಕಡ್, ಗ್ರಾಮ ಪಂಚಾಯತ ಜನಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಬಂಡೆಗಳನ್ನು ತೆರುವುಗೊಳಿಸಲು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಂಡು ಸ್ಥಳೀಯರಲ್ಲಿ ಧೈರ್ಯ ತುಂಬಿದರು.
ಸರಿ ಸುಮಾರು 2 ಎಕರೆಯ ವಿಸ್ತರಣದಷ್ಟು ಕೆಂಪುಕಲ್ಲಿನ ಬಂಡೆಯನ್ನೊಳಗೊಂಡ ಗುಡ್ಡದ ಕೆಳಗಡೆ ಸರಿ ಸುಮಾರು 50 ಕ್ಕೂ ಹೆಚ್ಚಿನ ಕುಟುಂಬಗಳು ವಾಸವಾಗಿದ್ದು ಕಳೆದ ಬಾರಿ ಮಳೆಗಾಲದಲ್ಲಿ ಒಂದು ಬಂಡೆ ಧರೆಗುರುಳಿತ್ತು. ಈ ಬಾರಿಯೂ ಅತ್ಯಂತ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿಯುವ ಸಾಧ್ಯತೆ ಇದೆ. ಮುಂಜಾಗ್ರತಾ ಕ್ರಮವಾಗಿ ಸ್ಥಳೀಯರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಮತ್ತೊಮ್ಮೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಶಾಶ್ವತ ಪರಿಹಾರಕ್ಕಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.